ಬೆಂಗಳೂರು: ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಅಗತ್ಯ ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಸರ್ಕಾರವನ್ನು ಆಗ್ರಹಿಸಿದೆ.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್, ‘ನೇಕಾರ ಸಮುದಾಯ ರಾಜ್ಯದಲ್ಲಿ ಸುಮಾರು 60 ಲಕ್ಷ ಜನಸಂಖ್ಯೆ ಹೊಂದಿದ್ದು, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಗಮ ಸ್ಥಾಪಿಸಲಾಗಿತ್ತು. ಆದರೆ ನಿಗಮಕ್ಕೆ ಅನುದಾನ ನೀಡದ ಕಾರಣ, ಸಮುದಾಯದ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದು ದೂರಿದರು.
‘ಎಚ್.ಕಾಂತರಾಜ ನೇತೃತ್ವದಲ್ಲಿ ನಡೆದ ಜಾತಿ ಗಣತಿ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಜಾರಿಗೊಳಿಸಬೇಕು. ರಾಜ್ಯದಲ್ಲಿರುವ ಹಿಂದುಳಿದ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹಂಚಿಕೆ ಮಾಡಬೇಕು’ ಎಂದು ಒತ್ತಾಯಿಸಿದರು.
‘2024ರ ಫೆಬ್ರುವರಿಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ನೇಕಾರರ ಸಮುದಾಯಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಸುವಂತೆ ಅವರಲ್ಲಿ ಮನವಿ ಮಾಡಲಾಗುವುದು’ ಎಂದು ಹೇಳಿದರು.
ಒಕ್ಕೂಟದ ಮಹಿಳಾ ವಿಭಾಗದ ರಾಜ್ಯ ಘಟಕದ ಅಧ್ಯಕ್ಷೆ ಉಮಾ ಜಗದೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.