ADVERTISEMENT

20 ಸಾವಿರ ಶಾಲೆಗಳಲ್ಲಿ ಎನ್‌ಇಪಿ ; ಸಚಿವ ನಾಗೇಶ್‌

ಮೇ ಮೊದಲನೇ ವಾರ ಎಸ್‌ಎಸ್ಎಲ್‌ಸಿ ಫಲಿತಾಂಶ 

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 14:32 IST
Last Updated 11 ಏಪ್ರಿಲ್ 2022, 14:32 IST
ಬಿ.ಸಿ. ನಾಗೇಶ
ಬಿ.ಸಿ. ನಾಗೇಶ   

ಆಲಮಟ್ಟಿ(ವಿಜಯಪುರ):ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 20 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿಯನ್ವಯ ಬೋಧನೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ.ಸಿ. ನಾಗೇಶ್ ತಿಳಿಸಿದರು.

ಆಲಮಟ್ಟಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಹೆಚ್ಚಿನ ಶಾಲೆಗಳಲ್ಲಿ ಜಾರಿಗೆ ತರಲಾಗುವುದು ಎಂದರು.

ಶಿಥಿಲಾವಸ್ಥೆಯಲ್ಲಿರುವ ಪ್ರಾಥಮಿಕ ಕೊಠಡಿಗಳ ದುರಸ್ತಿಗೂ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ರಾಜ್ಯದಾದ್ಯಂತ ಎಸ್‌ಎಸ್ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯವಾಗಿದ್ದು, ಮೇ ಮೊದಲ ವಾರ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರಎಸ್‌ಎಸ್ಎಲ್‌ಸಿ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದರು.

ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ 98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರು ಪ್ರಮಾಣ ಎಂದಿನಂತೆ ಮುಂದುವರೆದಿದೆ ಎಂದು ಸಚಿವರು ಮಾಹಿತಿ ನೀಡಿದರು.

ಏಪ್ರಿಲ್‌ 12ರಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ ಎಂದರು.

ವಿಧಾನಪರಿಷತ್ ಸದಸ್ಯ ಅರುಣ ಶಹಾಪುರ, ಬಿಇಓ ಸಂಗಮೇಶ ಪೂಜಾರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.