ಬೆಳಗಾವಿ: ಕೋವಿಡ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ರಾಜ್ಯ ಸರ್ಕಾರ, ಹೊಸ ವರ್ಷಾಚರಣೆಯ ಕೂಟಗಳು ಹಾಗೂ ಚಿತ್ರಮಂದಿರಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಬೆಳಿಗ್ಗೆ ಸಂಪುಟ ಸಭೆ ಬಳಿಕ ಉನ್ನತಮಟ್ಟದ ಸಭೆ ನಡೆಸಿದ ಕಂದಾಯ ಸಚಿವ ಆರ್. ಅಶೋಕ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಬಿಗಿಗೊಳಿಸುವ ತೀರ್ಮಾನ ಕೈಗೊಂಡರು. ಬಳಿಕ ಆರೋಗ್ಯ ಇಲಾಖೆ ಆಯುಕ್ತರು ನೂತನ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
ರೆಸ್ಟೋರೆಂಟ್, ಬಾರ್ ಮತ್ತು ಪಬ್‌ಗಳಲ್ಲಿ ದೊಡ್ಡ ಮಟ್ಟದಲ್ಲಿ ಹೊಸ ವರ್ಷಾಚರಣೆ ಕೂಟಗಳನ್ನು ಆಯೋಜಿಸಿದಲ್ಲಿ ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶ ನೀಡಬೇಕು. ಸಮಾರಂಭಗಳಲ್ಲಿ ಭಾಗವಹಿಸುವವರ ದೇಹದ ಉಷ್ಣಾಂಶ ತಪಾಸಣೆಗೆ ವ್ಯವಸ್ಥೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.
60 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು, ಗರ್ಭಿಣಿಯರು, ಚಿಕ್ಕ ವಯಸ್ಸಿನ ಮಕ್ಕಳು ಹಾಗೂ ತೀವ್ರ ಸ್ವರೂಪದ ರೋಗಗಳಿಂದ ಬಳಲುತ್ತಿರುವವರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಏಳು ದಿನಗಳ ಪ್ರತ್ಯೇಕವಾಸ: ಅಂತರರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇಕಡ 2ರಷ್ಟು ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗುವುದು. ಸೋಂಕು ದೃಢಪಟ್ಟವರಲ್ಲಿ ಸಿ.ಟಿ ಮೌಲ್ಯ 25ಕ್ಕಿಂತ ಕಡಿಮೆ ಇರುವವರ ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನೆ ಅಧ್ಯಯನಕ್ಕೆ ಕಳುಹಿಸಲಾಗುವುದು. ವಿದೇಶಗಳಿಂದ ಬಂದಿಳಿದ ಸಂದರ್ಭದಲ್ಲಿ ಸೋಂಕು ಪತ್ತೆಯಾದರೆ ಅಂಥವರನ್ನು ಪ್ರತ್ಯೇಕವಾಸದಲ್ಲಿ ಇರಿಸಲು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಲಾಗಿದೆ.
ಕೋವಿಡ್ ದೃಢಪಟ್ಟ ವಿದೇಶಿ ಪ್ರಯಾಣಿಕರು ಏಳು ದಿನಗಳ ಕಾಲ ಪ್ರತ್ಯೇಕವಾಸದಲ್ಲಿ ಇರಬೇಕು. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಆಸ್ಪತ್ರೆಗೆ ದಾಖಲಾಗಬೇಕು ಎಂದು ಸೂಚಿಸಲಾಗಿದೆ.
ನಿರ್ಬಂಧ ಇಲ್ಲ: ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸುಧಾಕರ್, ‘ಯಾವುದೇ ಕಾರ್ಯಕ್ರಮಗಳಿಗೂ ನಿರ್ಬಂಧ ಇರುವುದಿಲ್ಲ. ಪಾದಯಾತ್ರೆ, ಬಸ್ ಯಾತ್ರೆ ಎಲ್ಲದ್ದಕ್ಕೂ ಅವಕಾಶವಿದೆ. ಆದರೆ, ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲನೆ ಕಡ್ಡಾಯ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.