ADVERTISEMENT

ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 16:09 IST
Last Updated 6 ನವೆಂಬರ್ 2024, 16:09 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಈ ಕುರಿತಂತೆ ಎಚ್‌.ಡಿ.ಕುಮಾರಸ್ವಾಮಿ, ಸುರೇಶ್ ಬಾಬು ಮತ್ತು ನಿಖಿಲ್‌ ಕುಮಾರಸ್ವಾಮಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಹಷ್ಮತ್‌ ಪಾಷ ಅವರು, ‘ದೂರಿನಲ್ಲಿ ಮಾಡಲಾಗಿರುವ ಆರೋಪಗಳು ಸುಳ್ಳು ಮತ್ತು ಸೃಷ್ಟಿ ಮಾಡಿರುವ ಆರೋಪಗಳಾಗಿವೆ. ಅರ್ಜಿದಾರರನ್ನು ಅವಮಾನಿಸಬೇಕೆಂಬ ಏಕೈಕ ಉದ್ದೇಶದಿಂದ ಈ ರೀತಿಯ ಎಫ್‌ಐಆರ್ ದಾಖಲು ಮಾಡಲಾಗಿದೆ. ಕೆಲವು ರಾಜಕೀಯ ವಿರೋಧಿಗಳು ಚಂದ್ರಶೇಖರ್‌ ಅವರನ್ನು ಪ್ರಚೋದಿಸಿದ್ದಾರೆ. ದಾಖಲಾಗಿರುವ ಎಫ್‌ಐಆರ್‌ ಅನ್ನೇ ಮುಂದಾಗಿಸಿಕೊಂಡು ಹಳೆಯ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಪ್ರಾಸಿಕ್ಯೂಷನ್‌ ಮುಂದಾಗಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ರಾಜ್ಯ ಪ್ರಾಸಿಕ್ಯೂಷನ್‌ಗೆ ಈ ಕುರಿತಂತೆ ಆದೇಶಿಸಿ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿತು. ಪ್ರಕರಣದ ಪ್ರತಿವಾದಿಯಾದ ಎಂ.ಚಂದ್ರಶೇಖರ್ ಅವರಿಗೆ ತುರ್ತು ನೋಟಿಸ್‌ ಜಾರಿಗೊಳಿಸಲು ಆದೇಶಿತು. ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.