ADVERTISEMENT

ಶಿವಮೂರ್ತಿ ಶರಣರ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 15:49 IST
Last Updated 14 ಅಕ್ಟೋಬರ್ 2024, 15:49 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಮಠಾಧಿಪತಿ ಶಿವಮೂರ್ತಿ ಶರಣರು ನನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ನೀಡಿರುವ ದೂರಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಪೊಲೀಸರು ಶರಣರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ಹೈಕೋರ್ಟ್‌ ಆದೇಶಿಸಿದೆ.

‘ನನ್ನ ವಿರುದ್ಧ ಚಿತ್ರದುರ್ಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸಬೇಕು ಮತ್ತು ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಬೇಕು’ ಎಂದು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌, ‘ಶರಣರ ವಿರುದ್ಧ ದಾಖಲಾಗಿರುವ ಈ ಮೊದಲಿನ ಪೋಕ್ಸೊ ಕಾಯ್ದೆ ಆರೋಪಗಳ ದೂರಿಗೂ ಎರಡನೇ ದೂರಿಗೂ ಏನೇನೂ ವ್ಯತ್ಯಾಸವಿಲ್ಲ. ಮಠದ ಅಡುಗೆ ಕೆಲಸದ ಮಹಿಳೆ ನೀಡಿದ ಹೇಳಿಕೆ ಆಧರಿಸಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ದೂರಿನ ಅಂಶಗಳ ಮೇಲೆ ಅರ್ಜಿದಾರರನ್ನು ಬಂಧಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫಿರ್ಯಾದುದಾರರು ಮನವಿ ಮಾಡಿದ್ದಾರೆ. ಈ ಮೊದಲಿನ ಪ್ರಕರಣದಲ್ಲಿ ಈಗಾಗಲೇ 13 ಸಾಕ್ಷಿಗಳ ವಿಚಾರಣೆ ಮುಗಿದಿರುವ ಕಾರಣ ಅರ್ಜಿದಾರರು ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿದ್ದಾರೆ. ವಾಸ್ತವದಲ್ಲಿ ಈ ಪ್ರಕರಣದಲ್ಲಿ ಗಲೀಜು ರಾಜಕೀಯ ಅಡಕವಾಗಿದ್ದು ಎಫ್‌ಐಆರ್‌ಗೆ ತಡೆ ನೀಡಬೇಕು’ ಎಂದು ಕೋರಿದರು.

ADVERTISEMENT

ಇದಕ್ಕೆ ಪ್ರತಿಯಾಗಿ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್‌, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಕೆಗೆ ಸಮಯಾವಕಾಶ ಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಬೇಡ’ ಎಂದು ಪ್ರಾಸಿಕ್ಯೂಷನ್‌ಗೆ ಆದೇಶಿಸಿ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.