ದಾವಣಗೆರೆ: ‘ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಆಗುವವರು ಯಾರು ಎಂಬ ಚರ್ಚೆ ಈಗಲೇ ಬೇಡ. ಚೌಚೌ ಸರ್ಕಾರದ ಬದಲು ಕಾಂಗ್ರೆಸ್ ಅಧಿಕಾರಕ್ಕೆ ಮೊದಲು ಬರಲಿ. ಬಳಿಕ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸೋಣ’ ಎಂದು ಕಾಂಗ್ರೆಸ್ ನಾಯಕ ಎಚ್.ಎಂ. ರೇವಣ್ಣ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆಯಂಥ ಹಿರಿಯರು ಪಕ್ಷದಲ್ಲಿದ್ದಾರೆ. ಕಾಂಗ್ರೆಸ್ 130 ವರ್ಷಗಳ ಇತಿಹಾಸ ಇರುವ ಪಕ್ಷ. ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಮುಖ್ಯಮಂತ್ರಿ ಯಾರು ಎಂಬುದನ್ನು ಯಾರೋ ಒಬ್ಬರು ಹುಟ್ಟು ಹಾಕಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಹಿತ ಯಾರು ಮುಖ್ಯಮಂತ್ರಿ ಎಂಬುದನ್ನು ಕಾಲ ನಿರ್ಧರಿಸುತ್ತದೆ. ಕಾಂಗ್ರೆಸ್‌ನವರೇ ಮುಖ್ಯಮಂತ್ರಿ ಆಗುತ್ತಾರೆ ಎಂಬುದಷ್ಟೇ ನಿಜ. ಡಿಕೆಶಿ, ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಗಾಡೋದು ನಿಲ್ಲಿಸಬೇಕು. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಬೇಕು. ಈಗ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಲಹೆ ನೀಡಿದರು.
‘ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರಲು ಬಿಜೆಪಿಗೆ ಹೋದ 17 ಮಂದಿಯೂ ನೆಮ್ಮದಿಯಾಗಿಲ್ಲ. ರಮೇಶ್ ಜಾರಕಿಹೊಳಿ ಕೂಡ ಇದರಿಂದ ಹೊರತಲ್ಲ. ನೆಮ್ಮದಿಯಾಗಿದ್ದಾರಾ ಎಂಬುದನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಕೇಳಿ ನೋಡಿ; ಗೊತ್ತಾಗುತ್ತದೆ. ಅವರೆಲ್ಲ ಮತ್ತೆ ಕಾಂಗ್ರೆಸ್‌ಗೆ ಬರೋದು ಬಿಡೋದನ್ನು ಪಕ್ಷ ತೀರ್ಮಾನಿಸುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.