ADVERTISEMENT

ಗ್ರಾಮಗಳಲ್ಲಿ MSIL ಮದ್ಯದ ಮಳಿಗೆ ತೆರೆಯುವ ತೀರ್ಮಾನ ತೆಗೆದುಕೊಂಡಿಲ್ಲ: ತಿಮ್ಮಾಪುರ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 10:32 IST
Last Updated 21 ಜೂನ್ 2024, 10:32 IST
<div class="paragraphs"><p> ಅಬಕಾರಿ ಅಧಿಕಾರಿಗಳ ಸಭೆಯಲ್ಲಿ&nbsp;ಸಚಿವ ಆರ್.ಬಿ. ತಿಮ್ಮಾಪುರ </p></div>

ಅಬಕಾರಿ ಅಧಿಕಾರಿಗಳ ಸಭೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ

   

ಕಲಬುರಗಿ: ‘ಮದ್ಯ ತಯಾರಿಕೆಗೆ ಬಳಸುವ ಸ್ಪಿರಿಟ್‌ನ್ನು ಖಾಸಗಿ ಡಿಸ್ಟಿಲರಿಗಳು ತಮಗೆ ತೋಚಿದ ದರದಲ್ಲಿ ಮಾರಾಟ ಮಾಡುತ್ತಿವೆ. ಬೇರೆ ರಾಜ್ಯಕ್ಕೆ ಕಡಿಮೆ ದರಕ್ಕೆ ಮಾರಾಟ ಮಾಡಿ ಕರ್ನಾಟಕದಲ್ಲಿ ಹೆಚ್ಚಿನ ದರಕ್ಕೆ ಸ್ಪಿರಿಟ್ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ನಿಯಂತ್ರಿಸಲು ಸರ್ಕಾರದಿಂದಲೇ ಬೆಲೆ ನಿಯಂತ್ರಣ ಸಮಿತಿ ರಚಿಸಲು ಚಿಂತನೆ ನಡೆದಿದೆ’ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.

ನಗರದ ಅಬಕಾರಿ ಭವನದಲ್ಲಿ ಶುಕ್ರವಾರ ಕಲಬುರಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳನ್ನೊಳಗೊಂಡ ವಿಭಾಗ ಮಟ್ಟದ ಅಬಕಾರಿ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಡಿಶಾದಲ್ಲಿ ಸ್ಪಿರಿಟ್ ದರ ನಿಯಂತ್ರಣಕ್ಕೆ ಸಮಿತಿ ಅಸ್ತಿತ್ವದಲ್ಲಿದೆ. ಅದೇ ಮಾದರಿಯನ್ನು ಇಲ್ಲಿ ಅಳವಡಿಸಿಕೊಂಡರೆ ಕಡಿಮೆ ಬೆಲೆಗೆ ಸ್ಪಿರಿಟ್ ದೊರೆಯಲಿದೆ. ಇದರಿಂದ ಗ್ರಾಹಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಪೂರೈಸಲು ಸಹಾಯಕವಾಗುತ್ತದೆ’ ಎಂದರು.

ADVERTISEMENT

‘ರಾಜ್ಯದಲ್ಲಿ ಪ್ರಿಮಿಯಂ ಮಾದರಿಯ ಮದ್ಯದ ದರ ಹೆಚ್ಚಿದ್ದು, ಸಾಮಾನ್ಯ ಮದ್ಯದ ದರ ಕಡಿಮೆ ಇದೆ. ಇತ್ತೀಚಿನ ದಿನಗಳಲ್ಲಿ ಬಿಯರ್ ಮಾರಾಟ ಪ್ರಮಾಣ ಹೆಚ್ಚಾಗಿದೆ. ಕೆಲ ಬಿಯರ್‌ಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿರುವ ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

‘ಬೇರೆ ರಾಜ್ಯಗಳಿಂದ ಬರುವ ಅಕ್ರಮ ಮದ್ಯ ಸಾಗಾಟವನ್ನು ತಡೆಯುವ ನಿಟ್ಟಿನಲ್ಲಿ ಅಬಕಾರಿ ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಲಾಗಿದೆ. ನಮ್ಮ ಅಧಿಕಾರಿಗಳು ಅಕ್ರಮ ಸಾಗಾಟದ ವಿಚಾರದಲ್ಲಿ ಹೆಚ್ಚು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ’ ಎಂದರು.

‘ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿಯೇ ಉತ್ತಮ ಗುಣಮಟ್ಟದ ಮದ್ಯ ತಯಾರಿಕೆಯಾಗುತ್ತಿದೆ. ಪ್ರತಿ ಗ್ರಾಮಗಳಲ್ಲಿ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಮದ್ಯದ ಮಳಿಗೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಶಾಲೆಗಳು, ಪ್ರಾರ್ಥನಾ ಮಂದಿರದ ಬಳಿ ಮದ್ಯದ ಅಂಗಡಿ ತಯಾರಿಕೆಗೆ ಅನುಮತಿ ನೀಡಿಲ್ಲ. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೂ ಅವಕಾಶ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ಸದಾಶಿವ ಆಯೋಗದ ವರದಿಯ ಜಾರಿಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ಕೇಂದ್ರವೂ ಈ ಕುರಿತ ಬೇಡಿಕೆಯನ್ನು ಶೀಘ್ರ ಈಡೇರಿಸಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಧಾನಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಅಬಕಾರಿ ಹೆಚ್ಚುವರಿ ಆಯುಕ್ತ ನಾಗರಾಜಪ್ಪ, ಅಬಕಾರಿ ಜಂಟಿ ಆಯುಕ್ತ ಬಸವರಾಜ ಎಚ್, ಸೇರಿದಂತೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಆರ್.ಬಿ. ತಿಮ್ಮಾಪುರ ಬೆಳಿಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು.

ಇಲಾಖೆಯಲ್ಲಿ ಅಬಕಾರಿ ಇನ್‌ಸ್ಪೆಕ್ಟರ್ ಹುದ್ದೆಗಳು ಖಾಲಿ, ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು.
ಆರ್.ಬಿ. ತಿಮ್ಮಾಪುರಅಬಕಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.