ಬೆಳಗಾವಿ: ‘ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿದ್ದ ₹ 413.08 ಕೋಟಿ ಅಪವ್ಯಯ ಆಗಿಲ್ಲ’ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಸ್ಪಷ್ಟಪಡಿಸಿದರು.
ವಿಧಾನಪರಿಷತ್ತಿನಲ್ಲಿ ಎನ್.ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಪ್ಪು ಕಲ್ಪನೆಯಿಂದ ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಸೆಸ್ ಹಣಕ್ಕೆ ಆದಾಯ ತೆರಿಗೆ ಪಾವತಿಸುವ ಅಗತ್ಯ ಇಲ್ಲ. ಈ ಪ್ರಕರಣದಲ್ಲಿ ನಮ್ಮ ಇಲಾಖೆ ಮೇಲ್ಮನವಿ ಸಲ್ಲಿಸಿದೆ. ಮುಟ್ಟುಗೋಲು ಹಾಕಿಕೊಂಡ ಹಣ ಮರಳಿ ಸಿಗುತ್ತದೆ ಎಂಬ ವಿಶ್ವಾಸ ಇದೆ’ ಎಂದರು.
ಜೆಡಿಎಸ್‌ನ ಅಪ್ಪಾಜಿ ಗೌಡ, ‘ಯಾವುದೇ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವ ಮುನ್ನಆದಾಯ ತೆರಿಗೆ ಇಲಾಖೆ ನೋಟಿಸ್ ನೀಡುತ್ತದೆ. ನೋಟಿಸ್‌ಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿದ್ದರೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ’ ಎಂದರು.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಕೆ.ಜೆ.ಜಾರ್ಜ್, ‘ಕೆಲವೊಮ್ಮೆ ಆದಾಯ ತೆರಿಗೆ ಅಧಿಕಾರಿಗಳು ನೋಟಿಸ್ ನೀಡದೆಯೂ ಹಣ ಮುಟ್ಟುಗೋಲು ಹಾಕಿಕೊಳ್ಳುತ್ತಾರೆ’ ಎಂದರು.
‘ಈ ಪ್ರಕರಣದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಮೊದಲೇ ನೋಟಿಸ್ ನೀಡಿದ್ದರು. ಕಾರ್ಮಿಕ ಇಲಾಖೆ ಕಾರ್ಯದರ್ಶಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿಲ್ಲ. ಹಾಗಾಗಿ ಈ ಪರಿಸ್ಥಿತಿ ಉಂಟಾಗಿದೆ. ಆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಅರ್ಥದಲ್ಲಿ ಉತ್ತರ ನೀಡಿದ್ದೀರಿ’ ಎಂದು ರವಿಕುಮಾರ್ ಬೇಸರ ವ್ಯಕ್ತಪಡಿಸಿದರು.
‘ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇನೆ’ ಎಂದು ಸಚಿವ ವೆಂಕಟರಮಣಪ್ಪ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.