ಬೆಂಗಳೂರು: ರಾಜ್ಯದಲ್ಲಿ 47,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಗತಿಯಲ್ಲಿದ್ದು, ನವೆಂಬರ್‌ನಲ್ಲಿ ಮತ್ತೊಮ್ಮೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ನರಸಿಂಹ ನಾಯಕ್ (ರಾಜು ಗೌಡ) ಪ್ರಶ್ನೆಗೆ ಗುರುವಾರ ಉತ್ತರಿಸಿದ ಅವರು, ‘ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 27,000 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಈಗ ನಡೆಯುತ್ತಿರುವ ನೇಮಕಾತಿಯಲ್ಲಿ 10,000ದಿಂದ 12,000 ಶಿಕ್ಷಕರು ಲಭ್ಯವಾಗಬಹುದು ಎಂಬ ನಿರೀಕ್ಷೆ ಇದೆ. ಕೊರತೆ ತಗ್ಗಿಸಲು ಮತ್ತೆ ನವೆಂಬರ್‌ನಲ್ಲಿ ಪರೀಕ್ಷೆ ನಡೆಸಿ ಫೆಬ್ರುವರಿಯೊಳಗೆ ನೇಮಕಾತಿ ಆದೇಶ ನೀಡಲಾಗುವುದು’ ಎಂದರು.
‘ರಾಜ್ಯದಲ್ಲಿ ಕೊರತೆ ಇರುವ ಶಿಕ್ಷಕರ ಸಂಖ್ಯೆಗೆ ಹೋಲಿಸಿದರೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶೇಕಡ 48ರಷ್ಟು ಹುದ್ದೆಗಳು ಖಾಲಿ ಇವೆ. ಪರಿಸ್ಥಿತಿ ಹೀಗೆಯೇ ಇದ್ದರೆ ನಮ್ಮ ಭಾಗದ ಮಕ್ಕಳ ಭವಿಷ್ಯ ಏನಾಗಬೇಕು? ಶಿಕ್ಷಕರನ್ನು ಒದಗಿಸಲು ಸಾಧ್ಯವಾಗದಿದ್ದರೆ ಆ ಭಾಗದ ಮಕ್ಕಳಿಗೆ ಪರೀಕ್ಷೆಗಳಿಲ್ಲದೇ ಉದ್ಯೋಗ ನೀಡುವ ವ್ಯವಸ್ಥೆ ಜಾರಿಗೊಳಿಸಿ’ ಎಂದು ರಾಜು ಗೌಡ ಆಗ್ರಹಿಸಿದರು.
ಕಾಂಗ್ರೆಸ್‌ನ ಅಮರೇಗೌಡ ಬಯ್ಯಾಪುರ, ಈಶ್ವರ ಖಂಡ್ರೆ ಸೇರಿದಂತೆ ಹಲವು ಶಾಸಕರು ಶಿಕ್ಷಕರ ಕೊರತೆ ನೀಗಿಸುವಂತೆ ಆಗ್ರಹಿಸಿದರು.
‘ಹೊಸ ಕಾಲೇಜು ಆರಂಭಿಸುವುದಿಲ್ಲ’
ಬೆಂಗಳೂರು: ರಾಜ್ಯದಲ್ಲಿ ಹಾಲಿ ಇರುವ ಸರ್ಕಾರಿ ಪದವಿ ಕಾಲೇಜುಗಳಿಗೆ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಆದ್ಯತೆ ನೀಡಲಾಗುವುದು. ಹೊಸ ಕಾಲೇಜು ಆರಂಭಿಸುವ ಪ್ರಸ್ತಾವವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಕಾಂಗ್ರೆಸ್‌ನ ಕೆ.ವೈ. ನಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ 440 ಸರ್ಕಾರಿ ಪದವಿ ಕಾಲೇಜುಗಳಿವೆ. 75 ಕಾಲೇಜುಗಳ ಗುಣಮಟ್ಟ ಉತ್ತಮವಾಗಿದೆ. 150 ಕಾಲೇಜುಗಳಿಗೆ ಮಾತ್ರ ನ್ಯಾಕ್ ಮಾನ್ಯತೆ ಹೊಂದಿವೆ. ಉಳಿದ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.