ಬೆಂಗಳೂರು: ‘ಸುಪ್ರೀಂ ಕೋರ್ಟ್‌ನ ಇತ್ತೀಚಿನ ಆದೇಶದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ಜಾತಿಯ (ಒಬಿಸಿ) ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿ ನಿವಾರಿಸಲು ರಾಜ್ಯ ಸರ್ಕಾರ ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಈ ಅಡ್ಡಿಯನ್ನು ಪರಿಹರಿಸಿಕೊಳ್ಳಲು ಸಾಧ್ಯವಿದೆ. ವರದಿಯನ್ನು ಸರ್ಕಾರ ಒಪ್ಪಿಕೊಂಡು ಜಾರಿಗೆ ತರಬೇಕು. ಇದನ್ನೇ ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯ ತಪ್ಪಿಸಬೇಕು‘ ಎಂದು ಒತ್ತಾಯಿಸಿದರು.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ವಿರೋಧ ಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು’ ಎಂದರು.
‘ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಲು ಪ್ರತ್ಯೇಕವಾದ ಆಯೋಗ ರಚಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಕರ್ನಾಟಕದಲ್ಲಿ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದೇ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಈ ರೀತಿ ವೈಜ್ಞಾನಿಕವಾಗಿ ದೇಶದ ಬೇರೆ ಯಾವ ರಾಜ್ಯಗಳಲ್ಲಿಯೂ ಸಮೀಕ್ಷೆ ನಡೆಸಲಾಗಿಲ್ಲ’ ಎಂದರು.
‘ಸುಪ್ರೀಂ ಕೋರ್ಟ್ 2010ರಲ್ಲಿಯೇ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿ ಆಗಿದ್ದಾಗ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು‘ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.