ಬೆಂಗಳೂರು: ‘ಒಕ್ಕಲಿಗರ ಸಂಘದ ಹಾಲಿ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾದರೆ ಆ ಪ್ರಕ್ರಿಯೆಯನ್ನು ಹೊಸದಾಗಿ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
‘ಎರಡೂ ಬಣಗಳು ಯಥಾಸ್ಥಿತಿ ಕಾಯ್ದುಕೊಳ್ಳಬೇಕು’ ಎಂದು ಸಿವಿಲ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಡಾ.ಕೆ.ವಿ.ರೇಣುಕಾಪ್ರಸಾದ್ ಸೇರಿದಂತೆ ಇತರರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಕುರಿತಂತೆ ಆದೇಶಿಸಿದೆ.
‘ಅರ್ಜಿದಾರರು ಅಥವಾ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಲಿ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಸ್ವತಂತ್ರರು. ಆದರೆ, ಅವರು ಅವಿಶ್ವಾಸ ನಿರ್ಣಯ ಮಂಡಿಸುವ ಮೊದಲು ಸಂಘದ ಕಾರ್ಯದರ್ಶಿಗೆ ನೋಟಿಸ್ ನೀಡಬೇಕು. ಅವಿಶ್ವಾಸ ನಿರ್ಣಯದ ಪ್ರಸ್ತಾವವನ್ನು ಸರ್ವ ಸದಸ್ಯರ ಸಭೆಯ ಮುಂದಿಟ್ಟು ಸೂಕ್ತ ನಿರ್ಣಯ ಕೈಗೊಳ್ಳಬೇಕು. ಸಭೆಯಲ್ಲಿ ಚರ್ಚೆಯಲ್ಲಿ ಭಾಗವಹಿಸುವ ಹಾಗೂ ಮತದಾನದ ಹಕ್ಕು ಸಂಘದ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಇದೇ ವೇಳೆ ನ್ಯಾಯಪೀಠ, ‘ಪದಾಧಿಕಾರಿಗಳ ವಿರುದ್ಧ ಪದೇ ಪದೇ ಹಕ್ಕುಚ್ಯುತಿ ಮಂಡನೆಯಾಗುವುದನ್ನು ತಪ್ಪಿಸಲು ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ನಂತರ ಒಂದು ವರ್ಷ ಅವಿಶ್ವಾಸ ನಿರ್ಣಯ ಮಂಡನೆ ಮಾಡದಂತೆ ಸಂಘದ ನಿಯಮಗಳಿಗೆ ತಿದ್ದುಪಡಿ ತರುವುದು ಸೂಕ್ತ’ ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಾಗಿ ಬಾಲಕೃಷ್ಣ ನೇತೃತ್ವದ ತಂಡ 2024ರ ಜುಲೈ 4ರಂದು ಆಯ್ಕೆಯಾಗಿತ್ತು. ಆದರೆ, ಕೆಲವು ಸದಸ್ಯರು, ಕೇವಲ 10 ದಿನಕ್ಕೇ ಅಂದರೆ 2024ರ ಜುಲೈ 18ಕ್ಕೆ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್ ನೀಡಿದ್ದರು. ಕಾರ್ಯಕಾರಿ ಸಮಿತಿ ಈ ನೋಟಿಸ್ ಅನ್ನು ತಿರಸ್ಕರಿಸಿತ್ತು.
ತದನಂತರ ಜುಲೈ 30ಕ್ಕೆ ಸಭೆ ನಡೆಸಿದ್ದ ಕೆಲವು ಸದಸ್ಯರು ಆಗಸ್ಟ್ 9ಕ್ಕೆ ತಾವೇ ಅವಿಶ್ವಾಸ ನಿರ್ಣಯದ ಕುರಿತು ಚರ್ಚೆಗೆ ನೋಟಿಸ್ ನೀಡಿದ್ದರು. ಆಗ ಸಂಘದ ಹಾಲಿ ಪದಾಧಿಕಾರಿಗಳು ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಸಿವಿಲ್ ನ್ಯಾಯಾಲಯ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಉಭಯ ತಂಡಗಳಿಗೆ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.