ಬೆಂಗಳೂರು: ‘ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಬೈರೇಗೌಡರು ಐದು ವರ್ಷ ಕೃಷಿ ಸಚಿವರಾಗಿದ್ದು, ಈ ರಾಜ್ಯದ ದೌರ್ಭಾಗ್ಯ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಂದು ಹೇಳಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಕುರಿತು ನೀಡಿರುವ ಹೇಳಿಕೆ ಬಗ್ಗೆ ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿದ್ದಾರೆ.
‘ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನ ಜ್ಞಾನವನ್ನು ಪ್ರಶ್ನಿಸಿದ್ದಾರೆ. ರೈತನದು ‘ಕನಿಷ್ಠ ಜ್ಞಾನ’ ಎಂದೂ ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವ ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತ ಸಾಮಾನ್ಯರೂ ಇದ್ದೇವೆ’ ಎಂದು ಹೇಳಿದ್ದಾರೆ.
‘ಕೃಷ್ಣ ಬೈರೇಗೌಡರು ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಎಂದು ಟವಲ್ ಹಾಕುತ್ತಿರಬಹುದು. ದುರಾಡಳಿತದಿಂದ ಬೇಸತ್ತಿರುವ ಕರ್ನಾಟಕಕ್ಕೆ ನಿಮ್ಮಂತ ಸುಶಿಕ್ಷಿತ, ಸಭ್ಯ, ಬುದ್ಧಿವಂತ ನಾಯಕರು ಮುಖ್ಯಮಂತ್ರಿ ಆದರೆ ಒಳ್ಳೆಯದೇ. ಆದರೆ, ನಿಮ್ಮ ಕಾಂಗ್ರೆಸ್ ಹೈಕಮಾಂಡ್‌ಗೆ ಬೇಕಾಗಿರುವುದು ಸಂಪನ್ಮೂಲ ಒದಗಿಸುವ ಮಹಾನಾಯಕರೇ ಹೊರತು ನಿಮ್ಮಂತಹ ಸಂಪನ್ಮೂಲ ವ್ಯಕ್ತಿಗಳಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.