ADVERTISEMENT

ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’: ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜುಲೈ 2023, 6:59 IST
Last Updated 18 ಜುಲೈ 2023, 6:59 IST
ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ
ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಮಹಾಘಟಬಂಧನ್ ಸಭೆಗಾಗಿ ಹೊರ ರಾಜ್ಯಗಳಿಂದ ಬಂದ ಗಣ್ಯರನ್ನು ಸ್ವಾಗತಿಸಲು ಶಿಷ್ಟಾಚಾರದ ಪ್ರಕಾರವೇ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗಣ್ಯರನ್ನು ಆಹ್ವಾನಿಸಲು ಐಎಎಸ್ ಅಧಿಕಾರಿಗಳು ನಿಯೋಜನೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿದ್ದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ‘ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ 'ರಾಜಕೀಯ, ಆಡಳಿತ ವಸಾಹತುಶಾಹಿ'ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ ಎಂದು ಟೀಕಿಸಿದ್ದರು.

ಕುಮಾರಸ್ವಾಮಿ ಆರೋಪಕ್ಕೆ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿರುವ ಸಿಎಂ, ‘ಇಂದು ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿತ್ತು. ಶಿಷ್ಟಾಚಾರದ ಪ್ರಕಾರ ಆ ಎಲ್ಲ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಇದರ ಹೊರತಾಗಿ ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಯಾವ ಪಾತ್ರವೂ ಇಲ್ಲ.ಈ ರೀತಿಯ ಶಿಷ್ಟಾಚಾರದ ಪಾಲನೆ ಹಿಂದಿನ ಎಲ್ಲ ಸರ್ಕಾರದ ಕಾಲದಲ್ಲಿಯೂ ನಡೆದಿತ್ತು ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.