ತುಮಕೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆಸುತ್ತಿರುವ ಪಾದಯಾತ್ರೆ ಫೆ. 18ರಂದು ಬೆಂಗಳೂರು ತಲುಪಲಿದ್ದು, ಫೆ. 21ರಂದು ನೈಸ್ ರಸ್ತೆಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಸಮಾವೇಶ ನಡೆಸಲು ಬುಧವಾರ ರಾತ್ರಿ ನಡೆದ ಸಮುದಾಯ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯ ನಂತರ ಪಾದಯಾತ್ರೆ ನೇತೃತ್ವ ವಹಿಸಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಬೆಂಗಳೂರಿನಲ್ಲಿ ಸಮಾವೇಶ ಅಂತ್ಯವಾಗುವುದರ ಒಳಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೀಸಲಾತಿ ಕಲ್ಪಿಸಿ ಆದೇಶಿಸಬೇಕು. ಇಲ್ಲವಾದರೆ ಪ್ರತಿ ದಿನವೂ ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಸಭೆಗೆ ಬಂದಿದ್ದ ಸಚಿವರಾದ ಸಿ.ಸಿ.ಪಾಟೀಲ, ಮುರುಗೇಶ ನಿರಾಣಿ ಅವರು ಮುಖ್ಯಮಂತ್ರಿ ಜತೆ ಚರ್ಚಿಸಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ ಹೋರಾಟ ನಿಲ್ಲುವುದಿಲ್ಲ ಎಂದರು.
ಪಾದಯಾತ್ರೆ ಫೆ. 18ಕ್ಕೆ ಬೆಂಗಳೂರು ತಲುಪಲಿದ್ದು, ನಗರದಲ್ಲಿ ನಮ್ಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಫೆ. 20ರ ವರೆಗೂ ಮುಂದುವರಿಯಲಿದೆ. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ‘ಬೆಂಗಳೂರಿನಲ್ಲಿ ಸಮಾವೇಶ ನಡೆದ ದಿನವೇ ಮೀಸಲಾತಿ ಆದೇಶ ಹೊರಡಿಸಬೇಕು. ಇಲ್ಲವಾದರೆ ವಿಧಾನಸೌಧದ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡಲಾಗುವುದು’ ಎಂದು ತಿಳಿಸಿದರು.
ಪಾದಯಾತ್ರೆ 500 ಕಿ.ಮೀ ಸಾಗಿ ಬಂದಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಮಾಜದ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ. ಸಮಾಜದ ಮುಖಂಡರು, ಇತರ ಸ್ವಾಮೀಜಿಗಳು ಗೊಂದಲದ ಹೇಳಿಕೆ ನೀಡಬಾರದು ಎಂದು ಮನವಿ ಮಾಡಿದರು.
ಸಚಿವರಾದ ಸಿ.ಸಿ.ಪಾಟೀಲ, ಮುರುಗೇಶ ನಿರಾಣಿ, ಶಾಸಕ ಬಸನಗೌಡ ಪಾಟೀಲ ಸೇರಿದಂತೆ ಸಮಾಜದ ಮುಖಂಡರು, ಸ್ವಾಮೀಜಿಗಳು, ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.