ಬೆಂಗಳೂರು: ‘ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ಎಸಗಿದ್ದಾರೆ’ ಎಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ‘ಕ್ರಿಷ್ ಆರ್ಟ್ ವರ್ಲ್ಡ್’ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
‘ನನ್ನ ವಿರುದ್ಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ನ್ಯಾಯಿಕ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಬೆಂಗಳೂರಿನ ವಿಶ್ವೇಶ್ವರಯ್ಯ ಲೇ ಔಟ್ ನಿವಾಸಿಯಾದ ಕೃಷ್ಣ ನಾಯಕ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಪ್ರಕರಣದ ತನಿಖೆಗೆ ಸರ್ಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಆಯೋಗವೊಂದನ್ನು ರಚಿಸಿದೆ. ಅಂತೆಯೇ, ಪ್ರಕರಣವನ್ನು ಸಿಐಡಿಗೂ ವಹಿಸಿದೆ. ಇದಕ್ಕೆ ನ್ಯಾಯಾಲಯದಲ್ಲಿ ತಡೆ ಇದೆ. ಏತನ್ಮಧ್ಯೆ, ಖಾಸಗಿ ದೂರೊಂದನ್ನೂ ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿದೆ. ಸರ್ಕಾರ ಒಟ್ಟು ಮೂರು ಬಗೆಯಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದೆ’ ಎಂದು ದೂರಿದರು.
‘ಅರ್ಜಿದಾರರು ನಿರ್ಮಿತಿ ಕೇಂದ್ರದ ಕಾರ್ಯಾದೇಶದಂತೆ ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಕಾನೂನು ತೊಡಕುಗಳನ್ನು ಸೃಷ್ಟಿಸಿ ಕಾಮಗಾರಿ ಪೂರ್ಣಗೊಳಿಸಲು ನಿರಂತರವಾಗಿ ಅಡ್ಡಿಪಡಿಸಲಾಗುತ್ತಿದೆ. ಹೀಗಾಗಿ, ಪ್ರಕರಣ ರದ್ದುಪಡಿಸಬೇಕು ಮತ್ತು ಕಾಮಗಾರಿ ಮುಂದುವರಿಸಲು ನಿರ್ಮಿತಿ ಕೇಂದ್ರಕ್ಕೆ ಅನುಮತಿ ನೀಡಬೇಕು’ ಎಂದು ಮನವಿ ಮಾಡಿದರು.
ಇದಕ್ಕೆ ಫಿರ್ಯಾದುದಾರರ ಪರ ವಕೀಲರು, ‘ಪರಶುರಾಮ ಪ್ರತಿಮೆಯ ಗುಣಮಟ್ಟ, ಅದರ ಸ್ಥಾಪನೆ ನಮಗೆ ಮುಖ್ಯವಲ್ಲ. ನಮ್ಮ ಮನವಿ ಏನಿದ್ದರೂ, ಜಿಎಸ್‌ಟಿ ವಂಚನೆ ಮತ್ತು ಅರ್ಜಿದಾರರ ಖಾತೆಯಿಂದ ನಿರ್ಮಿತಿ ಕೇಂದ್ರದ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವುದರ ಬಗ್ಗೆ ಮಾತ್ರ’ ಎಂದು ಸಮಜಾಯಿಷಿ ನೀಡಿದರು.
ವಾದ-ಪ್ರತಿವಾದ ಆಲಿಸಿ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಸೆಪ್ಟಂಬರ್ 10ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.