ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ (ಪಿಜಿ ನೀಟ್) ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅ.7ರ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ.
ಈವರೆಗೆ ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಈಗಾಗಲೇ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಅ.7ರ ಸಂಜೆ 6ರವರೆಗೆ ಅರ್ಜಿಯ ವಿವರಗಳ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸದವರು ಶುಲ್ಕ ಪಾವತಿಸಿ, ತಿದ್ದುಪಡಿ ಮಾಡಿಸಬಹುದು.
ಕೆಇಎ ಕಚೇರಿಯಲ್ಲಿ ಅ.7ರಿಂದ 18ರವರೆಗೆ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಖುದ್ದು ಹಾಜರಾಗಬೇಕು. ಈ ಪ್ರಕ್ರಿಯೆ ಮುಗಿಸದವರು ಸೀಟು ಹಂಚಿಕೆ ಪ್ರಕ್ರಿಯೆಗೆ ಅರ್ಹರಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.