ADVERTISEMENT

‘ಶಕ್ತಿ’ ಆಕ್ಷೇಪಿಸಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 31 ಜುಲೈ 2023, 23:32 IST
Last Updated 31 ಜುಲೈ 2023, 23:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ, ‘ಶಕ್ತಿ ಯೋಜನೆ’ಯಿಂದ ಪ್ರಯಾಣಿಕರು ಅನೇಕ ತೊಂದರೆಗಳನ್ನು ಎದುರಿಸುವಂತಾಗಿದೆ. ಅಷ್ಟೇ ಅಲ್ಲ; ಯೋಜನೆಯು ಆರ್ಥಿಕ ಸಂಕಷ್ಟಗಳಿಗೆ ದೂಡುವ ಆತಂಕವಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಇನ್ನಷ್ಟೇ ವಿಚಾರಣೆಗೆ ಬರಬೇಕಿರುವ ಈ ಅರ್ಜಿಯನ್ನು ಕಾನೂನು ವಿದ್ಯಾರ್ಥಿ
ಗಳಾದ ಬೆಂಗಳೂರಿನ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಮುಂಬೈನ ಯಾಶಿಕಾ ಸರವಣ ಸಲ್ಲಿಸಿದ್ದಾರೆ. ಸಾರಿಗೆ ಇಲಾಖೆ ಹಾಗೂ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.  

ಅರ್ಜಿಯಲ್ಲಿ ಏನಿದೆ ?: ‘ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಬಸ್‌ಗಳಲ್ಲಿ ಜನ
ದಟ್ಟಣೆ ಹೆಚ್ಚಾಗಿದೆ. ಸೀಟು ಪಡೆಯಲು ಗಲಾಟೆ, ಹೊಡೆದಾಟ ಸಂಭವಿಸಿವೆ. ಹಿರಿಯ ನಾಗರಿಕರು, ಮಕ್ಕಳು ಬಸ್‌ ಹತ್ತಲು ಆಗುತ್ತಿಲ್ಲ. ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲಾ-ಕಾಲೇಜು ತಲುಪಲು ಆಗುತ್ತಿಲ್ಲ. ಇದರಿಂದಾಗಿ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಅನುಚಿತ ವರ್ತನೆ, ಅಹಿತಕರ ಘಟನೆಗಳು ನಡೆಯುತ್ತಿವೆ. ಬಸ್ ನಿಲ್ದಾಣ ಮತ್ತು ಸರ್ಕಾರಿ ಬಸ್‌ಗಳು ಯುದ್ಧ ಭೂಮಿ, ಮೀನು ಮಾರುಕಟ್ಟೆ ಆಗಿವೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ADVERTISEMENT

‘ಯೋಜನೆ ಜಾರಿಗೆ ಬಂದಾಗಿನಿಂದ 3 ಕೋಟಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರಿಂದ ತೆರಿಗೆದಾರರ ₹100 ಕೋಟಿ
ಯಷ್ಟು ಹಣ ಪ್ರತಿ ವಾರ ನಷ್ಟವಾಗುತ್ತಿದೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಶಾಲಾ ಮಕ್ಕಳಿಗೆ ವಿಶೇಷ ಬಸ್‌: ಮನವಿ

‘ಶಾಲಾ ಮಕ್ಕಳು, ಹಿರಿಯ ನಾಗರಿಕರಿಗೆ ಬಸ್ ಹತ್ತಿ-ಇಳಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್‌ಗಳಲ್ಲಿ ಹತ್ತಲು ಮೊದಲು ಅವಕಾಶ ಮಾಡಿಕೊಡಬೇಕು. ಟಿಕೆಟ್ ಪಡೆದವರಿಗೆ ಶೇ 50ರಷ್ಟು ಸೀಟುಗಳನ್ನು ಮೀಸಲಿಡಬೇಕು. ಕಿಟಿಕಿ ಹಾಗೂ ಚಾಲಕ ಹತ್ತುವ ಬಾಗಿಲುಗಳ ಮೂಲಕ ಪ್ರಯಾಣಿಕರು ಬಸ್‌ಗಳಲ್ಲಿ ತೂರುವುದನ್ನು ನಿರ್ಬಂಧಿಸಬೇಕು. ಶಾಲಾ ಮಕ್ಕಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು’ ಎಂದು ಮನವಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.