ಬೆಂಗಳೂರು: ‘ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಹರಡಿದ ಆರೋಪದಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿರುವ ಹೈಕೋರ್ಟ್, ಅರ್ಜಿದಾರರಿಗೆ ₹25 ಸಾವಿರ ದಂಡ ವಿಧಿಸಿದೆ.
‘ಪ್ರಜ್ವಲ್ ರೇವಣ್ಣ 400 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿ, ಆ ಕ್ಷಣಗಳ ವಿಡಿಯೊಗಳನ್ನೂ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕವಾಗಿ ಸುಳ್ಳು ಹರಡಿದ ಮತ್ತು ದ್ವೇಷ ಭಾಷಣದ ಮೂಲಕ ರಾಹುಲ್ ಗಾಂಧಿ ಮಹಿಳೆಯರ ಘನತೆಗೆ ಕುಂದು ತಂದಿದ್ದಾರೆ’ ಎಂದು ಆರೋಪಿಸಿ, ‘ಅಖಿಲ ಭಾರತ ದಲಿತ ಕ್ರಿಯಾ ಸಮಿತಿ’ ರಾಷ್ಟ್ರೀಯ ಅಧ್ಯಕ್ಷ ಚಿ.ನಾ.ರಾಮು ಮತ್ತು ಸಮಿತಿಯ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಈ ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತಲ್ಲದೆ, ಅರ್ಜಿದಾರರಿಗೆ ₹25 ಸಾವಿರ ದಂಡ ವಿಧಿಸಿತು. ‘ದಂಡದ ಮೊತ್ತವನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಪಾವತಿಸಬೇಕು’ ಎಂದು ಆದೇಶಿಸಿತು.
ಏನಿದು ಅರ್ಜಿ?:
‘ಲೋಕಸಭಾ ಚುನಾವಣೆ ವೇಳೆ 2024ರ ಮೇ 2ರಂದು ಶಿವಮೊಗ್ಗದಲ್ಲಿ ಪ್ರಚಾರ ಭಾಷಣ ಮಾಡಿದ್ದ ರಾಹುಲ್ ಗಾಂಧಿ; ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಆ ಸಂದರ್ಭಗಳನ್ನು ವಿಡಿಯೊ ಮೂಲಕ ಚಿತ್ರೀಕರಿಸಿಕೊಂಡಿದ್ದಾರೆ. ಇಂತಹ ಅಭ್ಯರ್ಥಿಯ ಪರವಾಗಿ ಮತ ಕೇಳಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕ್ಷಮೆ ಕೋರಬೇಕು ಎಂಬ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ನಾರಿಯರ, ವಿಶೇಷವಾಗಿ ಹಾಸನ ಭಾಗದ ಮಹಿಳೆಯರ ಘನತೆಗೆ ಹಾನಿ ಉಂಟು ಮಾಡಿದೆ. ಸುಳ್ಳು ಸುದ್ದಿ ಹರಡುವ ಮೂಲಕ ರಾಹುಲ್ ಗಾಂಧಿ ಮತ ಗಳಿಕೆಗೆ ಈ ಪ್ರಕರಣವನ್ನು ಬಳಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ರಾಹುಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.