ಬೆಂಗಳೂರು: ‘ರಾಜ್ಯಸಭೆ ಚುನಾವಣೆ ಯಲ್ಲಿ ಕರ್ನಾಟಕದಿಂದ ಬಿಜೆಪಿಯ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಲು ತಂತ್ರಗಾರಿಕೆ ಹೆಣೆದು ಯಶಸ್ವಿಯಾಗಿರುವುದಕ್ಕೆ ಅಭಿನಂದನೆಗಳು’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಶ್ಲಾಘಿಸಿದ್ದಾರೆ.
ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ, ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ ಅವರು, ‘ಕ್ಲಿಷ್ಟಕರ ಸನ್ನಿವೇಶದಲ್ಲೂ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಯಶಸ್ವಿ ಆಗಿರುವುದಕ್ಕೆ ಹರ್ಷವ್ಯಕ್ತಪಡಿಸಿದರು’ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.
‘ಕರ್ನಾಟಕದಿಂದ ಮೂವರನ್ನು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವುಪಟ್ಟ ಪ್ರಯತ್ನ ಅಮೂಲ್ಯವಾದುದು. ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತೆ ತಿಳಿಸಿದ್ದಾರೆ’ ಎಂದೂ ಮೂಲಗಳು ಹೇಳಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೂ ಬೊಮ್ಮಾಯಿ ಅವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ.
‘ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಕಾರ್ಯತಂತ್ರ ರೂಪಿಸಿರುವುದು ಅಭಿನಂದನಾರ್ಹ. ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯೆ ಹೆಚ್ಚಳಕ್ಕೆ ಕರ್ನಾಟಕ ನೀಡಿದ ಕೊಡುಗೆಯಾಗಿದೆ. ಎಲ್ಲರಿಗೂ ಧನ್ಯವಾದ’ ಎಂದು ಅಮಿತ್ ಶಾ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.