ADVERTISEMENT

ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ: ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:32 IST
Last Updated 28 ಜೂನ್ 2024, 15:32 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದ ಎಫ್‌ಐಆರ್‌ ರದ್ದುಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು’ ಎಂಬ ಪ್ರಾಸಿಕ್ಯೂಷನ್‌ ಮನವಿಯನ್ನು ಪರಿಗಣಿಸಿದ ಹೈಕೋರ್ಟ್‌ ಸಮಯಾವಕಾಶ ನೀಡಿ ವಿಚಾರಣೆ ಮುಂದೂಡಿದೆ.

ಈ ಕುರಿತಂತೆ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಆದ ಹಿರಿಯ ವಕೀಲ ರವಿವರ್ಮಕುಮಾರ್ ಹಾಗೂ ರಾಜ್ಯ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌ ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಸಮಯಾವಕಾಶ ನೀಡುವಂತೆ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ತನಿಖಾಧಿಕಾರಿಗೆ ನಿರ್ದೇಶಿಸಿ ಇದೇ 14ರಂದು ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿತು.  

ADVERTISEMENT

ಇದೇ ವೇಳೆ ಸಂತ್ರಸ್ತ ಬಾಲಕಿಯ ಅಣ್ಣ ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನೂ ಇದೇ ನ್ಯಾಯಪೀಠ ವಿಚಾರಣೆ ನಡೆಸಿತು. ‘ಆರೋಪಿಯನ್ನು ಬಂಧಿಸಿಯೇ ವಿಚಾರಣೆಗೆ ಒಳಪಡಿಸಲು ನಿರ್ದೇಶಿಸಬೇಕು ಎಂಬ ಅಂಶವನ್ನು ಪುಷ್ಟೀಕರಿಸುವ ಸುಪ್ರೀಂ ಕೋರ್ಟ್‌ ಪೂರ್ವನಿದರ್ಶನಗಳನ್ನು ನ್ಯಾಯಾಲಯಕ್ಕೆ ಒದಗಿಸಿ’ ಎಂದು ಅರ್ಜಿದಾರರ ಪರ ವಕೀಲ ಎಸ್‌.ಬಾಲನ್‌ ಅವರಿಗೆ ಸೂಚಿಸಿ ವಿಚಾರಣೆ ಮುಂದೂಡಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.