ADVERTISEMENT

ರಾಮಮಂದಿರ ಉದ್ಘಾಟನೆ: ಬೆಂಗಳೂರು ಸೇರಿ ರಾಜ್ಯದಾದ್ಯಂತ ಪೊಲೀಸರು ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 21 ಜನವರಿ 2024, 15:30 IST
Last Updated 21 ಜನವರಿ 2024, 15:30 IST
<div class="paragraphs"><p>ಬೆಂಗಳೂರಿನಲ್ಲಿ ಪೊಲೀಸ್‌ ಭದ್ರತೆ </p></div>

ಬೆಂಗಳೂರಿನಲ್ಲಿ ಪೊಲೀಸ್‌ ಭದ್ರತೆ

   

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಸೋಮವಾರ ಬಾಲರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ವಿವಿಧ ಜಿಲ್ಲೆಗಳಲ್ಲಿ ಸಂಘಟನೆಗಳು, ವಿಶೇಷ ಕಾರ್ಯಕ್ರಮ ಆಯೋಜಿಸಿವೆ. ಕೆಲವು ಮಂದಿರಗಳ ಬಳಿ ನೇರ ಪ್ರಸಾರ ವೀಕ್ಷಣೆಗೆ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ. ಪ್ರಸಾದ ವಿತರಣೆ, ರಾಮನ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ಹಲವು ಜಿಲ್ಲೆಗಳಲ್ಲಿ ರಾಮನ ಮೂರ್ತಿಯ ಮೆರವಣಿಗೆ ನಡೆಸಲು ಸಂಘಟನೆಗಳು ಅವಕಾಶ ಕೋರಿದ್ದು, ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ADVERTISEMENT

‘ರಾಜ್ಯದ ಯಾವುದೇ ಭಾಗದಲ್ಲೂ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ವಹಿಸಬೇಕು’ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲಾಗಿದ್ದು, ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರಾರ್ಥನಾ ಮಂದಿರಗಳು, ಪ್ರಮುಖ ಜಂಕ್ಷನ್‌ಗಳು, ಹೆಚ್ಚು ಜನರು ಜಮಾವಣೆ ಆಗುವ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರೌಡಿ ಪಟ್ಟಿಯಲ್ಲಿ ಹೆಸರು ವ್ಯಕ್ತಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಬೆಳಗಾವಿ, ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರು ಬೀಡುಬಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.