ADVERTISEMENT

ಠಾಣೆಗಳು ರಿಯಲ್ ಎಸ್ಟೇಟ್‌ ಕೇಂದ್ರಗಳಾಗಿವೆ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2023, 16:30 IST
Last Updated 24 ನವೆಂಬರ್ 2023, 16:30 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಪೊಲೀಸ್‌ ಠಾಣೆಗಳು ರಿಯಲ್ ಎಸ್ಟೇಟ್‌ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ‘ ಎಂದು ಹೈಕೋರ್ಟ್‌ ಪೊಲೀಸರ ನಡೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

‘ನಮ್ಮ ವಿರುದ್ಧ ಬಾಣಸವಾಡಿ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶಿಸಬೇಕು‘ ಎಂದು ಕೋರಿ ಹೆಣ್ಣೂರು ಮುಖ್ಯರಸ್ತೆ ಗೆದ್ದಲಹಳ್ಳಿಯ ಶ್ರೀಜುವಿತ್ತಾ ರವಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ನಮಿತಾ ಮಹೇಶ್‌, ’ಅರ್ಜಿದಾರರ ಸಿವಿಲ್‌ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ‘ ಎಂದು ಆಕ್ಷೇಪಿಸಿದರು.

ADVERTISEMENT

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಪೀಠ, ’ಠಾಣೆಗಳು ರಿಯಲ್‌ ಎಸ್ಟೇಟ್‌ ವ್ಯವಹಾರಸ್ಥರ ಕೊಡುಕೊಳ್ಳುವಿಕೆ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಸಿವಿಲ್‌ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಸುಪ್ರಿಂ ಕೋರ್ಟ್‌ ಹಾಗೂ ಹೈಕೋರ್ಟ್‌ ಪದೇ ಪದೇ ನಿರ್ದೇಶನಗಳನ್ನು ನೀಡಿದ್ದರೂ, ಪೊಲೀಸರು ಮಾತ್ರ ಈ ಆದೇಶವನ್ನು ಉಲ್ಲಂಘಿಸುತ್ತಲೇ ಇದ್ದಾರೆ‘ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಪ್ರಕಣರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಎಸಿಪಿ ಇದೇ 29ರಂದು ಮಧ್ಯಾಹ್ನ 2.30ಕ್ಕೆ ಕೋರ್ಟ್‌ಗೆ ಖುದ್ದು ಹಾಜರಾಗಬೇಕು ಎಂದು ಆದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.