ಬೆಂಗಳೂರು: ‘ಸರ್ಕಾರದ ನೀತಿ, ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುವ ನಮ್ಮ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಹೆದರಿಸಿ ಮತ್ತು ಕಿರುಕುಳ ನೀಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆರೋಪಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಕರ್ತರನ್ನು ಹೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ದೂರಿದರು.
‘ಮಂಡ್ಯದಲ್ಲಿ ಇಬ್ಬರು ಮತ್ತು ಹಾಸನದಲ್ಲಿ ನಾಲ್ಕು ಜನ ಕಾರ್ಯಕರ್ತರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಈ ರೀತಿ ವಶಕ್ಕೆ ತೆಗೆದುಕೊಂಡವರನ್ನು 10,12,15 ಗಂಟೆಗಳ ಕಾಲ ವಿಚಾರಣೆ ನಡೆಸಿ ಬಿಡುತ್ತಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನವನ್ನು ಪ್ರಶ್ನಿಸುವ ಮತ್ತು ಟೀಕಿಸುವ ಅಭಿವ್ಯಕ್ತಿ ಹಕ್ಕು ಎಲ್ಲರಿಗೂ ಇದೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಮ್ಮ ಕಾರ್ಯಕರ್ತರ ಮನೆಗೆ ಹೋಗಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ’ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅನ್ನು ಟೀಕಿಸಿ ಪೋಸ್ಟ್ ಮಾಡಲಾಗಿದೆ. ಸುಳ್ಳು ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಆರೋಪಗಳ ಬಗ್ಗೆ ತನಿಖೆ ಮಾಡಲಿ. ಆದರೆ, ಕಾರ್ಯಕರ್ತರನ್ನು ಕರೆದುಕೊಂಡು ಹೋಗಿ ಬೆದರಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
‘ಅಪರಾಧ ವಿಭಾಗದ ಡಿಸಿಪಿ ಬದ್ರಿನಾಥ್ ಅವರನ್ನು ಭೇಟಿ ಮಾಡಿದ್ದೇವೆ. ಕಾರ್ಯಕರ್ತರಿಂದ ಮಾಹಿತಿ ಪಡೆದು ಬಿಟ್ಟು ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ. ಏನೇ ಇದ್ದರೂ ನಮ್ಮನ್ನು ಸಂಪರ್ಕಿಸಿ ಎಂದಿದ್ದೇವೆ. ಕಾರ್ಯಕರ್ತರನ್ನು ಹೆದರಿಸಬೇಡಿ ಎಂದು ಅವರಿಗೆ ಹೇಳಿದ್ದೇವೆ. ಬೆಂಗಳೂರಿನಲ್ಲಿ ಯಾರನ್ನೂ ಅರೆಸ್ಟ್ ಮಾಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ರವಿಕುಮಾರ್ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.