ನವದೆಹಲಿ: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕದ ಪವರ್ ಟಿ.ವಿ ಚಾನಲ್ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ, ‘ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’, ‘ಮೆಸರ್ಸ್ ಮಿಟ್‌ಕಾನ್ ಇನ್‌ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ’ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ‘ಇದು ಸಂಪೂರ್ಣ ರಾಜಕೀಯ ದ್ವೇಷವಲ್ಲದೆ ಬೇರೇನೂ ಅಲ್ಲ’ ಎಂದು ಅಭಿಪ್ರಾಯಪಟ್ಟಿತು.
‘ನಾವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಿಸಲು ಒಲವು ಹೊಂದಿದ್ದೇವೆ. ಇದು ರಾಜಕೀಯ ದ್ವೇಷದ ಸರಳ ಪ್ರಕರಣದಂತೆ ತೋರುತ್ತಿದೆ ಮತ್ತು ಅರ್ಜಿದಾರರನ್ನು ರಕ್ಷಿಸದಿದ್ದರೆ ಈ ನ್ಯಾಯಾಲಯವು ತನ್ನ ಕರ್ತವ್ಯದಲ್ಲಿ ವಿಫಲಗೊಳ್ಳುತ್ತದೆ’ ಎಂದು ಪೀಠ ಹೇಳಿತು. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತು. ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಪ್ರಕರಣವೇನು?:
‘ನಮ್ಮ ವಿರುದ್ಧ ಪವರ್ ಟಿ.ವಿ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ’ ಎಂದು ಆರೋಪಿಸಿ ಜೆಡಿಎಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು.
‘ಪವರ್ ಟಿ.ವಿ.ಚಾನಲ್, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯ್ದೆ–1995ರ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು’ ಎಂದು ಕಳೆದ ತಿಂಗಳ 25ರಂದು ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.