ADVERTISEMENT

ಪ್ರಜ್ವಲ್‌ ಜಾಮೀನು ಅರ್ಜಿ: ಎಸ್ಐಟಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 16:09 IST
Last Updated 5 ಜುಲೈ 2024, 16:09 IST
   

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್‌ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ನಿಯಮಿತ (ರೆಗ್ಯುಲರ್) ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಅರ್ಜಿಗಳನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು.

ಹೊಳೆನರಸೀಪುರ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 354, 354ಎ, 354ಬಿ, 354ಡಿ, 376, 376ಕೆ, 506 ಮತ್ತು 509ರ ಅಡಿ ಎಫ್ಐಆರ್‌ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ರೇವಣ್ಣ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ನಿಯಮಿತ ಜಾಮೀನು ಕೋರಿದ್ದಾರೆ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು.  

ADVERTISEMENT

ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಐಪಿಸಿ ಕಲಂ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ–2000ದ ಕಲಂ 66ಇ ಅಡಿ ಪ್ರಕರಣ ದಾಖಲಿಸಲಾಗಿದ್ದು, ಇದರಲ್ಲಿ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.