ADVERTISEMENT

ಪೆನ್‌ಡ್ರೈವ್ ಸಿದ್ಧಪಡಿಸಿದ್ದ ಚಾಲಕನ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 2 ಮೇ 2024, 18:29 IST
Last Updated 2 ಮೇ 2024, 18:29 IST
   

ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ವಿಡಿಯೊಗಳನ್ನು ಸೃಷ್ಟಿಸಿ ಪೆನ್‌ಡ್ರೈವ್‌ ಸಿದ್ಧಪಡಿಸಿದ್ದ ಆರೋಪದಡಿ, ಮಾಜಿ ಚಾಲಕ ಕಾರ್ತಿಕ್ ವಿರುದ್ಧ ಹಾಸನದ ಸೆನ್‌ (ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಯ ಚುನಾವಣೆ ಏಜೆಂಟ್‌ ಆಗಿರುವ ಎಂ.ಜಿ.ಪೂರ್ಣಚಂದ್ರ ತೇಜಸ್ವಿ ಅವರು ದೂರು ನೀಡಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಕಡವಿನ ಕೋಟೆಯ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್‌ ಗೌಡ ಹಾಗೂ ಚೇತನ್‌ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರೋಪಿಗಳು, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕಾರ್ಯಕರ್ತರ ಜೊತೆ ಸೇರಿಕೊಂಡು ಸಂಚು ರೂಪಿಸಿದ್ದರು. ಅದರಂತೆ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಭಾವಚಿತ್ರ ಹಾಗೂ ವಿಡಿಯೊಗಳನ್ನು ಅಶ್ಲೀಲವಾಗಿ ಚಿತ್ರೀಕರಿಸಿ ಮಾರ್ಪಿಂಗ್ ಮಾಡಿ ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿದ್ದಾರೆ. ಇದೇ ಫೋಟೊ ಹಾಗೂ ವಿಡಿಯೊಗಳನ್ನು ಹಲವಡೆ ಹಂಚಿಕೆ ಮಾಡಿರುವುದಾಗಿ ದೂರುದಾರರು ಆರೋಪಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

‘ಜೆಡಿಎಸ್–ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಹೆಸರು ಕೆಡಿಸಲು ಹಾಗೂ ಮತದಾರರು ಮತದಾನ ಮಾಡದಂತೆ ತಪ್ಪಿಸುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿರುವುದಾಗಿ ದೂರುದಾರರು ತಿಳಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರಕರಣ ಹಸ್ತಾಂತರಕ್ಕೆ ಪ್ರಕ್ರಿಯೆ: ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

ಇದೀಗ, ಚಾಲಕ ಕಾರ್ತಿಕ್ ಹಾಗೂ ಇತರರ ಮೇಲೆ ದಾಖಲಾಗಿರುವ ಪ್ರಕರಣವೂ ಸದ್ಯದಲ್ಲೇ ಎಸ್‌ಐಟಿಗೆ ಹಸ್ತಾಂತರವಾಗುವ ಸಾಧ್ಯತೆ ಇದೆ. ಇದಕ್ಕೆ ಸಂಬಂಧಪಟ್ಟಂತೆ ಕಾನೂನು ಪ್ರಕ್ರಿಯೆ ನಡೆಯುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.