ADVERTISEMENT

ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದು: ಕೇಂದ್ರದ ಪ್ರತಿಕ್ರಿಯೆ ಇಲ್ಲ- ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 23 ಮೇ 2024, 0:42 IST
Last Updated 23 ಮೇ 2024, 0:42 IST
ಜಿ.ಪರಮೇಶ್ವರ
ಜಿ.ಪರಮೇಶ್ವರ    

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೆ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ದೂರಿದರು.

ಈ ವಿಚಾರವಾಗಿ ಕೇಂದ್ರಕ್ಕೆ ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ, ಎಸ್‌ಐಟಿಯೂ ಪತ್ರ ಬರೆದಿದೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್‌ ವಿರುದ್ಧ ವಾರಂಟ್‌ ಜಾರಿ ಮಾಡಿರುವುದನ್ನು ಕೇಂದ್ರದ ಗಮನಕ್ಕೆ ತರಲಾಗಿದೆ. ವಾರಂಟ್‌ ಜಾರಿಯಾದ ಬಳಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದರು.

ADVERTISEMENT

‘ಎಚ್‌.ಡಿ.ಕುಮಾರಸ್ವಾಮಿ ಪ್ರತಿಯೊಂದು ವಿಚಾರಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಎಸ್‌ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ’ ಎಂದರು.

ರಾಜ್ಯದಲ್ಲಿ ಕೊಲೆಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂಬುದನ್ನು ನಾನು ಮತ್ತು ಮುಖ್ಯಮಂತ್ರಿಯವರು ಅಂಕಿ–ಅಂಶ ಪ್ರಕಟಿಸಿದ್ದೇವೆ. ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುದಕ್ಕೆ ಅಂಕಿ–ಅಂಶಗಳಿವೆ. ಅದಕ್ಕೆ ಬಿಜೆಪಿಯವರು ಮೊದಲು ಉತ್ತರ ನೀಡಲಿ ಎಂದರು.

ಹೊರಗುತ್ತಿಗೆ ನೇಮಕಾತಿಯಡಿ ಮೀಸಲಾತಿ ನೀಡುವ ವಿಷಯವನ್ನು ಪ್ರಸ್ತಾಪಿಸಿದ ಅವರು, ‘ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳಿಗೆ ಯಾರಿಗೂ ಗೊತ್ತಿಲ್ಲದೇ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮೀಸಲಾತಿ ನಿಯಮ ಪಾಲನೆ ಆಗುತ್ತಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.