ADVERTISEMENT

ಸುಪ್ರೀಂ ಕೋರ್ಟ್‌ನಲ್ಲೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2024, 15:35 IST
Last Updated 11 ನವೆಂಬರ್ 2024, 15:35 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ನವದೆಹಲಿ: ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜಾಮೀನು ನಿರಾಕರಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. 

ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ
ಪೀಠವು ಅರ್ಜಿಯನ್ನು ತಿರಸ್ಕರಿಸಿತು ಮತ್ತು ಪ್ರಜ್ವಲ್‌ ಅತ್ಯಂತ ಪ್ರಭಾವಶಾಲಿ ವ್ಯಕ್ತಿ ಎಂಬುದನ್ನು ಗಣನೆಗೆ ತೆಗೆದುಕೊಂಡಿತು.

‘ಪ್ರಜ್ವಲ್‌ ವಿರುದ್ಧದ ಆರೋಪಗಳು ಗಂಭೀರವಾದವು. ಹೀಗಾಗಿ, ಜಾಮೀನು ನಿರಾಕರಿಸಿ ಕರ್ನಾಟಕ ಹೈಕೋರ್ಟ್ ಅ.21ರಂದು ನೀಡಿರುವ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ’ ಎಂದಿತು.

ADVERTISEMENT

ಆರೋಪಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿ ಈಗಾಗಲೇ ಸಲ್ಲಿಕೆಯಾಗಿದೆ. ಆರಂಭಿಕ ದೂರಿನಲ್ಲಿ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಬಗ್ಗೆ ನಿರ್ದಿಷ್ಟವಾಗಿ ಹೇಳಿರಲಿಲ್ಲ’ ಎಂದು ಗಮನ ಸೆಳೆದರು.

‘ಕಕ್ಷಿದಾರರ ವಿರುದ್ಧ ದೂರು ಸಲ್ಲಿಕೆಯಾಗಿದ್ದು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ. ಆಗ ಅವರು ವಿದೇಶದಲ್ಲಿದ್ದರು. ಬಳಿಕ ಪೊಲೀಸರಿಗೆ ಶರಣಾದರು. ಸಂಸದರಾಗಿದ್ದ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ’ ಎಂದು ಅವರು ಪೀಠದ ಗಮನಕ್ಕೆ ತಂದರು.

ಆರು ತಿಂಗಳ ನಂತರ ಅರ್ಜಿಯನ್ನು ನವೀಕರಿಸಲು ಅರ್ಜಿದಾರರಿಗೆ ಅವಕಾಶ ನೀಡುವಂತೆ ವಕೀಲರು ನ್ಯಾಯಾಲಯವನ್ನು ಕೋರಿದರು. ‘ನಾವು ಏನನ್ನೂ ಹೇಳುವುದಿಲ್ಲ’ ಎಂದು ಪೀಠ ಹೇಳಿತು.

ಅಕ್ಟೋಬರ್‌ 21ರಂದು ಜಾಮೀನು ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿದ್ದ ಹೈಕೋರ್ಟ್‌, ‘ಮೇಲ್ನೋಟಕ್ಕೆ ಪ್ರಜ್ವಲ್‌ ಒಬ್ಬ ಲಂಪಟ. ಆತ ತನ್ನ ಇಂದ್ರಿಯಗಳ ಮೇಲಿನ ನಿಯಂತ್ರಣ ಕಳೆದುಕೊಂಡು, ಕಾಮಾತುರನಾಗಿ ವರ್ತಿಸಿದ್ದಾನೆ. ಆರೋಪಿಯ ನೀಚತನದ ಕೃತ್ಯಗಳು ಸ್ವಸ್ಥ ಸಮಾಜದ ಬೆನ್ನುಹುರಿಯಲ್ಲಿ ಚಳಿ ಹುಟ್ಟಿಸುವಂತಿವೆ’ ಎಂದು ಆತಂಕ ವ್ಯಕ್ತಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.