ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಐವರು ಆರೋಪಿಗಳ ಕುರಿತಂತೆ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎನ್‌ಐಎ, ಆರೋಪಿಗಳ ಬಂಧನಕ್ಕೆ ಅಗತ್ಯವಾದ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಜೊತೆಗೆ, ಮಾಹಿತಿದಾರರ ವಿವರವನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.
ಮೊಹಮ್ಮದ್ ಮುಸ್ತಫಾ, ಮಸೂದ್ ಅಗ್ನಾಡಿ, ಮೊಹಮ್ಮದ್ ಷರೀಫ್ ಕೊಡಾಜೆ, ಉಮ್ಮರ್ ಆರ್ ಮತ್ತು ಅಬೂಬಕರ್ ಸಿದ್ದಿಕ್ ಎಂಬ ಹೆಸರಿನ ಆರೋಪಿಗಳ ಕುರಿತು ಎಎನ್‌ಐ ಮಾಹಿತಿ ಕೋರಿದೆ. ಮಾಹಿತಿ ಕಳುಹಿಸಲು +919497715294 ವಾಟ್ಸ್‌ಆ್ಯಪ್ ಸಂಖ್ಯೆಯನ್ನು ಎನ್‌ಐಎ ನೀಡಿದೆ.
2022ರ ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.