ತುಮಕೂರು: ‘ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ’ ಎಂದು ಸುಳ್ಳು ಜಾಹೀರಾತು ನೀಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಮಂಗಳವಾರ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ. ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಮತ್ತೊಮ್ಮೆ ಜಾಹೀರಾತು ಪರಿಶೀಲಿಸಿ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಹೇಳಿದರು.
‘ಕರ್ನಾಟಕದಲ್ಲಿ ಅಭಿವೃದ್ಧಿ ವಿಚಾರಗಳನ್ನು ಬದಿಗೊತ್ತಿ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಆದರೆ ಅನುಷ್ಠಾನ ಮಾಡಿಲ್ಲ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ’ ಎಂಬ ರೀತಿಯಲ್ಲಿ ಜಾಹೀರಾತು ನೀಡಿ ರಾಜ್ಯ ಸರ್ಕಾರವನ್ನು ಅವಮಾನ ಮಾಡಲಾಗಿದೆ. ಹಾಗಾಗಿ ಕಾನೂನು ಕ್ರಮ ಅನಿವಾರ್ಯವಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.