ಬೆಂಗಳೂರು: ‘ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಮತ್ತು ಸಬಲೀಕರಣಗೊಳಿಸಲು ಕಾರ್ಯಪಡೆ ರಚಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಇ-ಖಾತೆ ಕುರಿತಂತೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಲಿರುವ ಸಭೆಗೆ ಪೂರ್ವಭಾವಿಯಾಗಿ ತಮ್ಮ ಇಲಾಖೆಯ ಅಧಿಕಾರಿಗಳ ಜೊತೆ ಮಂಗಳವಾರ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಪ್ರಿಯಾಂಕ್, ‘ಕಂದಾಯ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಯ ಜೊತೆ ಸಮನ್ವಯ ಸಾಧಿಸುವ ಉದ್ದೇಶದಿಂದ ಈ ಕಾರ್ಯಪಡೆ ರಚಿಸಲಾಗುವುದು’ ಎಂದರು.
‘ಗ್ರಾಮಠಾಣ ವ್ಯಾಪ್ತಿಯ ಹೊರಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಛಯಗಳು ನಿರ್ಮಾಣಗೊಂಡಿದ್ದು, ಈ ಪೈಕಿ ಬಹುಪಾಲು ಆಸ್ತಿಗಳು ಗ್ರಾಮ ಪಂಚಾಯಿತಿ ತೆರಿಗೆ ವ್ಯಾಪ್ತಿಗೆ ಒಳಪಟ್ಟಿಲ್ಲ. ಇದರಿಂದಾಗಿ ಗ್ರಾಮ ಪಂಚಾಯತಿಗಳ ಸಂಪನ್ಮೂಲ ಕ್ರೋಡೀಕರಣಕ್ಕೆ ಹಿನ್ನಡೆ ಆಗಿದೆ’ ಎಂದು ಸಚಿವರು ಹೇಳಿದರು.
‘ಗ್ರಾಮ ಪಂಚಾಯತಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ನಾಗರಿಕರಿಗೆ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವ ಅನಿವಾರ್ಯ ಇದೆ. ಹೀಗಾಗಿ, ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಪರಿಹಾರಗಳನ್ನು ಕಂಡುಕೊಳ್ಳಲು ಕಾರ್ಯಪಡೆ ರಚಿಸಲಾಗುವುದು. ಗ್ರಾಮಗಳಿಗೆ ಹೊಂದಿಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಅಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು ದಾಖಲೆಯನ್ನು ಸುಗಮವಾಗಿ ಪಡೆದುಕೊಕೊಳ್ಳಲು ಪರಿಹಾರಗಳನ್ನು ಕಾರ್ಯಪಡೆ ಸೂಚಿಸಲಿದೆ’ ಎಂದು ಅವರು ಹೇಳಿದರು.
ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್, ಇ-ಆಡಳಿತ ವಿಭಾಗದ ನಿರ್ದೇಶಕಿ ಡಾ. ನಂದಿನಿದೇವಿ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.