ADVERTISEMENT

ವೃತ್ತಿಪರ ಕೋರ್ಸ್‌ಗಳ ಶುಲ್ಕ ಶೇ 10 ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 16:24 IST
Last Updated 14 ಜೂನ್ 2024, 16:24 IST
   

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 10ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಸಮ್ಮತಿಸಿದೆ.

ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಶುಕ್ರವಾರ ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.

ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 15ರಷ್ಟು ಹೆಚ್ಚಳ ಮಾಡುವಂತೆ ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಈಚೆಗೆ ಸರ್ಕಾರವನ್ನು ಒತ್ತಾಯಿಸಿತ್ತು.  

ADVERTISEMENT

ಬಿಜೆಪಿ ಅವಧಿಯಲ್ಲಿ ಹೊರಡಿಸಿದ್ದ ಶೇ 10ರಷ್ಟು ಶುಲ್ಕ ಹೆಚ್ಚಳದ ಆದೇಶವನ್ನೂ ಕಳೆದ ವರ್ಷ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ ಸರ್ಕಾರ ತಡೆ ಹಿಡಿದು, ಶೇ 7ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಹಾಗಾಗಿ, ಈ ಬಾರಿ ಶುಲ್ಕ ಹೆಚ್ಚಳ ಮಾಡುವಂತೆ ಮತ್ತೆ ಮನವಿ ಸಲ್ಲಿಸಲಾಗಿತ್ತು.

2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳ ಶುಲ್ಕ ₹38,200, ಅಲ್ಪಸಂಖ್ಯಾತ ಕಾಲೇಜುಗಳು ಸೇರಿದಂತೆ ಅನುದಾನ ರಹಿತ ಕಾಲೇಜುಗಳಲ್ಲಿ ₹98,984, ಖಾಸಗಿ ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ₹91,796 ಇತ್ತು. 2023–24ರಲ್ಲಿ ಶೇ 7ರಷ್ಟು ಹೆಚ್ಚಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.