ADVERTISEMENT

ಖಾದ್ಯಕ್ಕೆ ಕೃತಕ ಬಣ್ಣ ನಿಷೇಧ; ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 15:38 IST
Last Updated 24 ಜೂನ್ 2024, 15:38 IST
ಚಿಕನ್‌ ಕಬಾಬ್
ಚಿಕನ್‌ ಕಬಾಬ್   

ಬೆಂಗಳೂರು: ತರಕಾರಿ, ಮೀನು ಮತ್ತು ಮಾಂಸದ ಖಾದ್ಯ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಾದ್ಯಂತ ಮಾರಾಟ ಮಾಡಲಾಗುತ್ತಿರುವ ‘ಕಬಾಬ್‍’ನ ಗುಣಮಟ್ಟವು ಕೃತಕ ಬಣ್ಣ ಬೆರೆಸಿದ ಪರಿಣಾಮ ಕಳಪೆಯಾಗಿದೆ ಎಂಬ ದೂರು ಬಂದಿತ್ತು. ಹೀಗಾಗಿ, ‘ಕಬಾಬ್‍’ನ 39 ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು. ಅದರಲ್ಲಿ 8 ಮಾದರಿಗಳಲ್ಲಿ ಸನ್‍ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ (ಕೆಂಪು ಬಣ್ಣ) ಇರುವುದು ದೃಢಪಟ್ಟಿದೆ. 

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ ತಿನಿಸುಗಳನ್ನು ದೀರ್ಘಕಾಲ ಬಳಸುವುದರಿಂದ ಚಿಕ್ಕಮಕ್ಕಳೂ ಸೇರಿದಂತೆ ಬಳಕೆದಾರರು ಕ್ಯಾನ್ಸರ್‌ನಂಥ ಮಾರಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇದೆ. ಹಾಗಾಗಿ ಕೃತಕ ಬಣ್ಣ ಬಳಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆ ಮತ್ತು ₹ 10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT
ಆಹಾರ ಸುರಕ್ಷತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
–ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.