ADVERTISEMENT

ಅಲ್ಲಮ ದೇಗುಲ ರಕ್ಷಣೆ: ಕೇಂದ್ರ–ರಾಜ್ಯಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 16:13 IST
Last Updated 14 ಅಕ್ಟೋಬರ್ 2024, 16:13 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿರುವ 250 ವರ್ಷಗಳಿಗೂ ಹಳೆಯದಾದ ಅಲ್ಲಮಪ್ರಭು ದೇವಾಲಯವನ್ನು ಪಾರಂಪರಿಕ ಸ್ಮಾರಕ ಎಂದು ಘೋಷಿಸಬೇಕು ಹಾಗೂ ಇದನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ನಿರ್ದೇಶಿಸಬೇಕು’ ಎಂದು ಕೋರಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಗಡಹಿಂಗ್ಲಜ ತಾಲ್ಲೂಕಿನ ಹಲಕರ್ಣಿಯ ವಿದ್ಯಾರ್ಥಿ ನಿಖಿಲ್ ವಿಠಲ್ ಪಾಟೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ವಿದ್ಯಾರ್ಥಿ ನಿಖಿಲ್ ವಿಠಲ್ ಪಾಟೀಲ್ ಖುದ್ದು ಮಂಡಿಸಿದ ವಾದ ಆಲಿಸಿ, ಪ್ರತಿವಾದಿಗಳಾದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ) ಧಾರವಾಢ ವೃತ್ತದ ಸೂಪರಿಂಟೆಂಡೆಂಟ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿತು. ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 11ಕ್ಕೆ ಮುಂದೂಡಿತು. 

‘ಅಲ್ಲಮಪ್ರಭು ದೇವಾಲಯ ಕುರಿತು ಸರ್ವೇ ನಡೆಸಿರುವ ವರದಿಯನ್ನು ಒದಗಿಸದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಸಮಿತಿ ರಚನೆ ಮಾಡಬೇಕು. ಕರ್ನಾಟಕ ರಾಜ್ಯದಲ್ಲಿ ನೀರಿನಲ್ಲಿ ಮುಳುಗಡೆಯಾಗಿರುವ ಪಾರಂಪರಿಕ ದೇವಾಲಯಗಳ ಕುರಿತು ಸಮೀಕ್ಷೆ ನಡೆಸುವುದಕ್ಕಾಗಿ ಜಂಟಿ ಸಮಿತಿ ರಚನೆ ಮಾಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.