ರಾಯಚೂರು: ರಾಜ್ಯ ಸರ್ಕಾರ ಕಾಂತರಾಜ ಆಯೋಗ ವರದಿ ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಸೋಮವಾರ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 22ರಂದು ನಡೆದ ಸಮಾಜದ ಮುಖಂಡರ ಸಭೆಯಲ್ಲಿ ಕಾಂತರಾಜ ವರದಿ ತಿರಸ್ಕಾರಕ್ಕೆ ನಿರ್ಣಯ ಕೈಗೊಳ್ಳಲಾಗಿದೆ.
10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಅನೇಕ ವೈರುದ್ಯ, ಲೋಪಗಳಿಂದ ಕೂಡಿದ್ದು ಕೂಡಲೇ ಇದನ್ನು ಸರಿಪಡಿಸಿ ಹೊಸದಾಗಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಮಾಡಿದ ಕಾಂತರಾಜ ವರದಿ ಅಸಾಂವಿಧಾನಿಕವಾಗಿದ್ದು ಸ್ವೀಕಾರ್ಹವಲ್ಲ. ಉದ್ದೇಶಿತ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿದರು.
ವೀರಶೈವ ಲಿಂಗಾಯತದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಬಟನೆಯಲ್ಲಿ ನೀಲಗಲ್ ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯರು, ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು, ವೀರಸಂಗಮೇಶ್ವರ ಶಿವಾಚಾರ್ಯರು, ಅಭಿನವ ರಾಚೋಟಿವೀರ ಶಿವಾಚಾರ್ಯರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರು, ವಿವಿಧ ಸಂಘಟನೆಗಳ ಮುಖಂಡರಾದ ಶರಣು ಭೂಪಾಲ ನಾಡಗೌಡ, ಶಿವಶರಣರೆಡ್ಡಿ, ಸಿ.ಎಸ್ ಪಾಟೀಲ, ಶರಣಪ್ಪಗೌಡ ಜಾಡಲದಿನ್ನಿ, ಅಶೋಕ ಪಾಟೀಲ, ದೂರು ಬಸವರಾಜ, ನೀಲಕಂಠಯ್ಯ ಸ್ವಾಮಿ, ಚನ್ನಬಸವ ಮಿರ್ಜಾಪೂರು, ದಾನಪ್ಪ ಸುಭಾಷಚಂದ್ರ, ನಿರ್ಮಲಾ ಬೆಣ್ಣೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.