ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿರುವುದನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಪಿಎಸ್‌ಐ ಹಗರಣ ಮತ್ತು ಎಸಿಬಿ ದಾಳಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅವರು, ‘ಪಿಎಸ್‌ಐ ಹಗರಣದಲ್ಲಿ ಸರ್ಕಾರದ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿಬರುತ್ತಿದ್ದು, ಜನರ ಗಮನ ಬೇರೆಡೆಗೆ ಸೆಳೆಯಲು ನಮ್ಮ ಪಕ್ಷದ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ಮೂಲಕ ದಾಳಿ ಮಾಡಿಸಲಾಗಿದೆ. ಇಂತಹ ರಾಜಕೀಯ ಪ್ರೇರಿತ ಎಸಿಬಿ ದಾಳಿಯನ್ನು ನಾನು ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಮಂಗಳವಾರ ನಸುಕಿನಲ್ಲಿ ಐದು ಸ್ಥಳಗಳ ಮೇಲೆ ದಾಳಿಮಾಡಿ, ಶೋಧ ನಡೆಸುತ್ತಿದೆ.
ಜಾರಿ ನಿರ್ದೇಶನಾಲಯ ನೀಡಿರುವ ವರದಿ ಆಧರಿಸಿ ಜಮೀರ್ ವಿರುದ್ಧ ಎಸಿಬಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.