ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯಕ್ಕೆ ದಾಖಲೆ ಪ್ರಮಾಣದ ಬರ ಪರಿಹಾರ ನೀಡಿದೆ. ರಾಜ್ಯ ಸರ್ಕಾರ ಈಗ ತಕರಾರು ಎತ್ತಿ ಮತ್ತೆ ನ್ಯಾಯಾಲಯಕ್ಕೆ ಹೋದರೆ ಛೀಮಾರಿ ಹಾಕಿಸಿಕೊಳ್ಳುತ್ತದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಹಿಂದೆಂದೂ ನೀಡದಷ್ಟು ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೂ, ಮತ್ತೆ ನ್ಯಾಯಾಲಯಕ್ಕೆ ಹೋಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಪರಿಹಾರ ಬಿಡುಗಡೆ ಕುರಿತು ನ್ಯಾಯಾಲಯಕ್ಕೆ ಹೋಗಲಿ, ಛೀಮಾರಿಯನ್ನೂ ಹಾಕಿಸಿಕೊಂಡು ಬರಲಿ’ ಎಂದರು.
‘ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ಪರಿಹಾರ ವಿತರಣೆಯಲ್ಲಿ ನ್ಯಾಯ ಒದಗಿಸಿರಲಿಲ್ಲ. ಆಗ ಬೇಡಿಕೆಯ ಶೇಕಡ 8ರಿಂದ ಶೇ 9ರಷ್ಟು ಮೊತ್ತ ಮಾತ್ರ ನೀಡಲಾಗಿತ್ತು. ಅದನ್ನು ಹೇಳುವ ಯೋಗ್ಯತೆ ಕೂಡ ಕಾಂಗ್ರೆಸ್ ನಾಯಕರಿಗೆ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರದ ಈಗಿನ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ ಎಂಬುದನ್ನು ಅಂಕಿಅಂಶಗಳೇ ಸಾಬೀತುಪಡಿಸುತ್ತವೆ. ಈಗ ಮತ್ತೆ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಹೋದರೆ ಹಿಂದಿನ ಎಲ್ಲ ವಿಚಾರಗಳೂ ಹೊರ ಬರುತ್ತವೆ ಎಂದರು.
‘ಕಾನೂನಿನಡಿ ಎಲ್ಲರೂ ಸಮಾನರು’: ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಅಶೋಕ, ‘ಈ ಕುರಿತು ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಕಾನೂನಿನಡಿ ಎಲ್ಲರೂ ಸಮಾನರು. ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ತನಿಖೆ ವರದಿ ಬಂದ ಬಳಿಕ ಸರ್ಕಾರವೇ ಕ್ರಮ ಜರುಗಿಸುತ್ತದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.