ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ದಾಖಲೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು.
ಹೆಚ್ಚುವರಿ ದಾಖಲೆಗಳ ಸಲ್ಲಿಕೆ ಕೋರಿದ್ದ ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ 2018ರ ಸೆಪ್ಟೆಂಬರ್ 11ರಂದು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಈ ಮೇಲ್ಮನವಿ ಸಲ್ಲಿಸಲಾಗಿತ್ತು. ಆದರೆ, ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಲು ಆಗದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ನೇತೃತ್ವದ ಪೀಠ ತಿಳಿಸಿತು.
‘ಅರ್ಜಿದಾರರು ಈಗಾಗಲೇ ಅತ್ಯಾಚಾರ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಮುಂದಿನ ವಿಚಾರಣೆಯ ಹಂತದಲ್ಲಿ ಅನುಕೂಲವಾಗಲಿ ಎಂಬ ಕಾರಣದಿಂದ ಮಹತ್ವದ ದಾಖಲೆಸಲ್ಲಿಸಲು ಬಯಸಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲ ಕೆ.ವಿ. ವಿಶ್ವನಾಥನ್ ನ್ಯಾಯಪೀಠಕ್ಕೆ ವಿವರಿಸಿದರು.
ಆದರೆ, ಹೈಕೋರ್ಟ್ ವ್ಯಾಪ್ತಿ ಮೀರಿ ಪ್ರಕರಣದ ವಿಚಾರಣೆ ನಡೆಸಲು ಆಗದು ಎಂದು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಅನಿರುದ್ಧ ಬೋಸ್ ಅವರಿದ್ದ ಪೀಠ ತಿಳಿಸಿತು.
ನ್ಯಾಯ ಪೀಠವು ವಿಚಾರಣೆಗೆ ನಿರಾಸಕ್ತಿ ತೋರಿದ್ದರಿಂದ ಮೇಲ್ಮನವಿಯನ್ನು ಹಿಂದಕ್ಕೆ ಪಡೆಯುವುದಾಗಿ ವಕೀಲರು ಒಪ್ಪಿಕೊಂಡರು.
‘ಸ್ವಾಮೀಜಿ ಅವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದು ಆರೋಪಿಸಿ ರಾಮಕಥಾ ಗಾಯಕಿಯೊಬ್ಬರು 2014ರ ಆಗಸ್ಟ್ 24ರಂದು ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.