ಬೆಂಗಳೂರು: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಲು ಶುಕ್ರವಾರ ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸಂಸದರ ಜತೆ ಸಭೆ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಇದ್ದರು. ಲೋಕಸಭಾ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್‌ನ ಅಭ್ಯರ್ಥಿಗಳೂ ಸಭೆಯಲ್ಲಿದ್ದರು.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾರ್, ʼನಮ್ಮ ಸಂಸದರು ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಕುರಿತು ರಾಹುಲ್ ಗಾಂಧಿಯವರು ಸಲಹೆ ನೀಡಿದ್ದಾರೆ. ದೆಹಲಿ, ಬೆಂಗಳೂರಿನಲ್ಲಿ ಹೆಚ್ಚು ಕಾಲ ಕಳೆಯುವುದಕ್ಕಿಂತ ಕ್ಷೇತ್ರದಲ್ಲಿ ಇದ್ದು ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಸೂಚಿಸಿದ್ದಾರೆʼ ಎಂದರು.
ಲೋಕಸಭಾ ಚುನಾವಣೆಯ ಸೋಲು-ಗೆಲುವಿನ ಕುರಿತು ಪರಾಮರ್ಶೆಗಾಗಿ ಶನಿವಾರ ಸಭೆ ನಡೆಸಲಾಗುವುದು. ಸೋತಿರುವ ಕ್ಷೇತ್ರಗಳಲ್ಲಿ ಹಿನ್ನಡೆಗೆ ಕಾರಣವಾಗಿರುವ ಅಂಶಗಳ ಕುರಿತು ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.