ADVERTISEMENT

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 8 ಮೇ 2024, 0:05 IST
Last Updated 8 ಮೇ 2024, 0:05 IST
ಮಳೆ
ಮಳೆ   

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 8ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಇದೇ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ತುಮಕೂರು, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ. 

ADVERTISEMENT

ಇದೇ ಹವಾಮಾನ ಮುಂದಿನ ಎರಡು ದಿನ ಮುಂದುವರಿಯಲಿದೆ. ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. 

ಮಳೆ ಪ್ರಮಾಣ: ಸೋಮವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಅತಿ ಹೆಚ್ಚು 7 ಸೆಂ.ಮೀ. ಮಳೆ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರದಲ್ಲಿ 5 ಸೆಂ.ಮೀ., ಚಾಮರಾಜನಗರ, ಮಂಡ್ಯ ಜಿಲ್ಲೆಯ ಹೊನಕೆರೆಯಲ್ಲಿ ತಲಾ 3 ಸೆಂ.ಮೀ., ಕೋಲಾರ, ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ತುಮಕೂರು ಜಿಲ್ಲೆಯ ಮಿಡಿಗೇಶಿ, ಗುಬ್ಬಿ, ಕೊಡಗು ಜಿಲ್ಲೆಯ ಭಾಗಮಂಡಲಗಳಲ್ಲಿ 2 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದ ಎಂಎಂ ಹಿಲ್ಸ್‌, ಕೊಳ್ಳೇಗಾಲ, ಬೆಂಗಳೂರು ಗ್ರಾಮಾಂತರ ಜಿ‌ಲ್ಲೆಯ ದೇವನಹಳ್ಳಿಯಲ್ಲಿ ತಲಾ 1 ಸೆಂ.ಮೀ. ಮಳೆ ಸುರಿದಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.