ADVERTISEMENT

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಶೀಘ್ರ: ಶಿವಕುಮಾರ್

ಉಪ ಮುಖ್ಯಮಂತ್ರಿ ಶಿವಕುಮಾರ್* ಸಿದ್ಧತೆ ಮಾಡಿಕೊಳ್ಳಲು ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಮೇ 2024, 15:50 IST
Last Updated 21 ಮೇ 2024, 15:50 IST
<div class="paragraphs"><p>ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. </p></div>

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

   

ಬೆಂಗಳೂರು: ಪಕ್ಷದ ನಾಯಕರು, ಕಾರ್ಯಕರ್ತರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕರೆ ನೀಡುವ ಮೂಲಕ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ನಡೆಯುವ ಸುಳಿವು ನೀಡಿದರು. 

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ’ಶೀಘ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಪಕ್ಷದ ಎಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು‘ ಎಂದರು. 

ADVERTISEMENT

ನೆಹರೂ, ರಾಜಗೋಪಾಲಾಚಾರಿ, ಕೆಂಗಲ್‌ ಹನುಮಂತಯ್ಯ, ಬಿ.ಡಿ. ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಹಲವು ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದಿದ್ದಾರೆ. ಅದಕ್ಕಾಗಿ ಪಕ್ಷದ ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ, ಹೊಸದಾಗಿ ರಚಿಸುವ ಸಮಯ ಬಂದಿದೆ ಎಂದು ಹೇಳಿದರು.

ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣತ್ಯಾಗ ಮಾಡಿದ ನಾಯಕ ರಾಜೀವ್ ಗಾಂಧಿ. ಸಾವಿರಾರು ಯುವ ನಾಯಕರನ್ನು ಸಮಾಜಕ್ಕೆ ಕೊಡುಗೆ ಕೊಟ್ಟ, ಯುವ, ವಿದ್ಯಾರ್ಥಿ ನಾಯಕತ್ವವನ್ನು ಬೆಳೆಸಿದರು ಎಂದು ಶಿವಕುಮಾರ್ ಹೇಳಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ರಾಜೀವ್‌ ಗಾಂಧಿ ಇಲ್ಲಿಯವರೆಗೂ ಇದ್ದಿದ್ದರೆ ಭಾರತ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ದೇಶವಾಗುತ್ತಿತ್ತು. ಯುವಕರಿಗೆ 18 ವರ್ಷಕ್ಕೆ ಮತದಾನದ ಹಕ್ಕು ನೀಡಿದರು, ಗ್ರಾಮಗಳಿಗೆ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸುವ ಮೂಲಕ ಅಂದೇ ಡಿಜಿಟಲ್‌ ಭಾರತಕ್ಕೆ ನಾಂದಿ ಹಾಡಿದ್ದರು. ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ತಂದು ಜನಸಾಮಾನ್ಯರಿಗೂ ಅಧಿಕಾರ ನೀಡಿದವರು ಎಂದು ಸ್ಮರಿಸಿದರು.

ಬದಲಾಗುವರೇ ಕೆಪಿಸಿಸಿ ಅಧ್ಯಕ್ಷ?

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವನ್ನು ಪರೋಕ್ಷವಾಗಿ ನೀಡಿದರು. ಚುನಾವಣೆಯ ನಂತರ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಸಂಪುಟದಲ್ಲಿ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಸ್ಥಾನ ಪಡೆದರೂ ಕೆಪಿಸಿಸಿ ಅಧ್ಯಕ್ಷಗಿರಿ ತೊರೆದಿರಲಿಲ್ಲ. ರಾಜೀವ್‌ ಗಾಂಧಿ ಪುಣ್ಯಸ್ಮರಣೆಯಲ್ಲಿ ಮಾತನಾಡಿದ ಅವರು ‘ನಾನು ಎಷ್ಟು ದಿನ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ನೀವೆಲ್ಲರೂ ಅದಕ್ಕೆ ಸಿದ್ಧರಾಗಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.