ಬೆಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು (ಆರ್‌ಜಿಯುಎಚ್‌ಎಸ್) ರಾಮನಗರ ಕ್ಯಾಂಪಸ್‌ಗೆ ಸ್ಥಳಾಂತರಿಸುವ ಪ್ರಕ್ರಿಯೆ ಒಂದು ತಿಂಗಳಲ್ಲಿ ಆರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವ ಕುರಿತು ಬುಧವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ರಾಮನಗರ ಸಮೀಪದ ಅರ್ಚಕರಹಳ್ಳಿ ಕ್ಯಾಂಪಸ್‌ಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ 17 ವರ್ಷಗಳ ಹಿಂದೆಯೇ ತೀರ್ಮಾನ ತೆಗೆದುಕೊಂಡಿತ್ತು. ಇದುವರೆಗೂ ಸಾಧ್ಯವಾಗಿರಲಿಲ್ಲ. ಈಗ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ಮೊದಲ ಹಂತದಲ್ಲಿ ಆಡಳಿತ ಕಚೇರಿ ಸ್ಥಳಾಂತರಿಸಲಾಗುವುದು. ಹಂತಹಂತವಾಗಿ ಒಂದು ವರ್ಷದ ಒಳಗೆ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಲಾಗುವುದು ಎಂದರು.
ಕಟ್ಟಡ ನಿರ್ಮಾಣಕ್ಕೆ ಅಗತ್ಯವಾಗಿದ್ದ ಭೂ ಸ್ವಾಧೀನ ಸಮಸ್ಯೆಗೆ ಪರಿಹಾರ ನೀಡಲಾಗಿದೆ. ಕಾಮಗಾರಿಗಳು ತ್ವರಿತವಾಗಿ ಸಾಗುತ್ತಿವೆ. ವೈದ್ಯಕೀಯ ಕಾಲೇಜು ಪ್ರಾರಂಭಕ್ಕೂ ಅಗತ್ಯವಾದ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ ಕನಕಪುರದಲ್ಲೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು. ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು. ಕನಕಪುರದಲ್ಲಿ ಮೂಲಸೌಕರ್ಯ ಇಲ್ಲ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಮಾನ್ಯತೆ ನೀಡಿರಲಿಲ್ಲ. ಆಯೋಗ ಸೂಚಿಸಿದ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿ, 2025–26ನೇ ಸಾಲಿನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ವಿವರ ನೀಡಿದರು.
ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕೆಲ ವರ್ಷಗಳ ಹಿಂದೆಯೇ ಭೂಮಿಪೂಜೆ ನೆರವೇರಿಸಲಾಗಿತ್ತು. ನಂತರ ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಕೆ. ಸುಧಾಕರ್ ಅವರು ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದರು. ಬಿಜೆಪಿ ದ್ವೇಷ ರಾಜಕಾರಣ ಮಾಡಿತು. ಆಗ ₹450 ಕೋಟಿ ಇದ್ದ ನಿರ್ಮಾಣ ವೆಚ್ಚ ಈಗ ₹850 ಕೋಟಿಗೆ ಏರಿಕೆಯಾಗಿದೆ. ಸರ್ಕಾರ ಈಗಾಗಲೇ ₹600 ಕೋಟಿ ಖರ್ಚು ಮಾಡಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.