ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸಿಐಡಿಯ ವಿಶೇಷ ತನಿಖಾ ದಳದ ವಶದಲ್ಲಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.
ಮುನಿರತ್ನ ವಿರುದ್ಧ ದಾಖಲಾಗಿದ್ದ ಕೊಲೆ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸರ್ಕಾರವು ಎಸ್‌ಐಟಿಗೆ ವಹಿಸಿ ಆದೇಶಿಸಿತ್ತು. ಹೆಚ್ಚಿನ ವಿಚಾರಣೆಗೆ ಬಾಡಿ ವಾರಂಟ್ ಮೇಲೆ ಅವರನ್ನು ಜೈಲಿನಿಂದ ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಈ ಅವಧಿ ಶನಿವಾರಕ್ಕೆ ಮುಕ್ತಾಯವಾಗಿದ್ದರಿಂದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.
ಆದೇಶದ ಬೆನ್ನಲ್ಲೇ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.
ಮುನಿರತ್ನ ಅವರಿಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್ಗೆ ಮನವಿ ಮಾಡಿದರು. ಈ ಸಂಬಂಧ ಜೈಲಿನ ಅಧಿಕಾರಿಗಳಲ್ಲಿ ಮನವಿ ಮಾಡುವಂತೆ ನ್ಯಾಯಾಲಯ ಸೂಚಿಸಿತು. ಅನುಮತಿ ನೀಡದಿದ್ದರೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಹೇಳಿತು.
ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಅವರನ್ನು ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದರು. ಇದಕ್ಕೂ ಮೊದಲು ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಆರೋಪದ ಅಡಿ ಮುನಿರತ್ನ ಅವರು ಜೈಲು ಸೇರಿದ್ದರು. ಆ ಪ್ರಕರಣದಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.