ಬೆಂಗಳೂರು: ಜನಪ್ರತಿನಿಧಿ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ಪ್ರಕಟಿಸಿದರು.
ಅರ್ಜಿದಾರರ ಪರ ವಕೀಲ ಜಿ.ಅರುಣ್, ‘ಅರ್ಜಿ ಹಿಂಪಡೆಯಲಾಗುವುದು’ ಎಂದು ನ್ಯಾಯಪೀಠಕ್ಕೆ ತಿಳಿಸಿದರಾದರೂ, ನ್ಯಾಯಪೀಠವು ‘ದೂರನ್ನಷ್ಟೇ ಆಧರಿಸಿ, ವಜಾ ಮಾಡಲಾಗಿದೆ’ ಎಂದು ಹೇಳಿತು.
ಪ್ರಕರಣ: ‘ಹಾಸನದಲ್ಲಿ 2021ರಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿ ಬಾಲಕಿಯರಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಲು ನಾನು ಪ್ರಜ್ವಲ್ ಅವರ ಕಚೇರಿಗೆ ತೆರಳಿದ್ದೆ. ಈ ಸಮಯದಲ್ಲಿ ಅವರು ನನಗೆ ಗನ್ ತೋರಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದರು. ಈ ಕೃತ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಆನಂತರ ಹಲವು ಬಾರಿ ವಿಡಿಯೊ ಕರೆ ಮಾಡಿ ನಗ್ನವಾಗುವಂತೆ ಸೂಚಿಸಿ, ವಿಡಿಯೊ ರೆಕಾರ್ಡ್ ಮಾಡಿಕೊಂಡಿದ್ದರು. ಈ ವಿಚಾರವನ್ನು ಬಹಿರಂಗಪಡಿಸಿದರೆ ಗಂಭೀರ ಕ್ರಮದ ಬೆದರಿಕೆ ಹಾಕಿದ್ದರು’ ಎಂದು ಸಂತ್ರಸ್ತೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.