ಬೆಂಗಳೂರು: ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಡದಿಯ ನಿತ್ಯಾನಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ಬಂಧನ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಸಂಬಂಧ ರಾಜ್ಯದ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವ ಕೇಂದ್ರದ ಅಧಿಕಾರಿಗಳು, ನಿತ್ಯಾನಂದ ಅವರ ತ್ವರಿತ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಅದರನ್ವಯ ರಾಜ್ಯ ಗೃಹ ಇಲಾಖೆ ನಿತ್ಯಾನಂದ ಬಂಧನಕ್ಕೆ ಸಿದ್ಧತೆ ಆರಂಭಿಸಿದೆ. ಈ ಸಂಬಂಧ ಸಿಐಡಿ ಅಧಿಕಾರಿಗಳಿಗೂ ಮಾಹಿತಿ ನೀಡಿದೆ.
‘ನಿತ್ಯಾನಂದ ಯಾವ ದೇಶದಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಯುತ್ತಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.
ದೂರು ನೀಡಿದ್ದ ಸಂತ್ರಸ್ತರು: ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ನಿತ್ಯಾನಂದ ವಿರುದ್ಧ ಅತ್ಯಾಚಾರ, ವಂಚನೆ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಪ್ರಕರಣಗಳು ದಾಖಲಾಗಿವೆ. ಇವುಗಳ ತನಿಖೆ ನಡೆಯುತ್ತಿರುವಾಗಲೇ ಆರೋಪಿ ತಲೆ
ಮರೆಸಿಕೊಂಡಿದ್ದಾರೆ. ‘ಪ್ರಕರಣದ ಸಂತ್ರಸ್ತರು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದಕ್ಕೆ ಕೇಂದ್ರ ಸ್ಪಂದಿಸಿದ್ದು, ಕ್ರಮ ಜರುಗಿಸುವಂತೆ 3 ರಾಜ್ಯಗಳ ಗೃಹ ಇಲಾಖೆಗೆ ಸೂಚನೆ ನೀಡಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.