ADVERTISEMENT

ಪಶು ಚಿಕಿತ್ಸಾಲಯ ಸ್ಥಳಾಂತರ: ಸರ್ಕಾರಕ್ಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 20:16 IST
Last Updated 10 ಜನವರಿ 2024, 20:16 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿರುವ 28 ಪಶುವೈದ್ಯ ಕೇಂದ್ರಗಳ ಸ್ಥಳಾಂತರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ‘ಅನಿಮಲ್ ರೈಟ್ಸ್ ಫಂಡ್ ಸಂಸ್ಥೆ’ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಒಟ್ಟು ಐವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.​ದೀಕ್ಷಿತ್​ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ರಾಜ್ಯ ಸರ್ಕಾರವು 1,300 ಪಶುಗಳಿಗಿಂತಲೂ ಕಡಿಮೆ ಸಂಖ್ಯೆಯಲ್ಲಿರುವ ಆಸ್ಪತ್ರೆಗಳ ವ್ಯಾಪ್ತಿಯಲ್ಲಿನ ಪಶು ಆಸ್ಪತ್ರೆಗಳನ್ನು ಸ್ಥಳಾಂತರಿಸುವ ಸಂಬಂಧ ಹೊರಡಿಸಿರುವ ಆದೇಶ ಅಸಂಬದ್ಧವಾಗಿದೆ. ಆದ್ದರಿಂದ, ಸರ್ಕಾರದ ಈ ಆದೇಶವನ್ನು ಹಿಂಪಡೆಯುವಂತೆ ನಿರ್ದೇಶಿಸಬೇಕು’ ಎಂದು ಕೋರಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಪ್ರತಿವಾದಿ ರಾಜ್ಯ ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಆಯುಕ್ತರು ಮತ್ತು ಉಪ ನಿರ್ದೇಶಕರಿಗೆ ನೋಟಿಸ್​ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?: ’ಬೆಂಗಳೂರು ನಗರ ಜಿಲ್ಲೆಯ ಯಲಹಂಕ, ಆನೇಕಲ್​, ಬೆಂಗಳೂರು ಈಶಾನ್ಯ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕು ಗಳಲ್ಲಿ ಗೋವುಗಳೂ ಸೇರಿದಂತೆ 13 ಲಕ್ಷಕ್ಕೂ ಹೆಚ್ಚಿನ ವಿವಿಧ ಜಾತಿಯ ಪ್ರಾಣಿಗಳು ಮತ್ತು ಸಾಕು ಪ್ರಾಣಿಗಳು ಇವೆ. ಇವುಗಳ ಆರೋಗ್ಯ ತಪಾಸಣೆಗೆ ಅನುಕೂಲಕರವಾಗಿರುವ ಗಂಟಿಗಾನಹಳ್ಳಿ, ಲಿಂಗನಹಳ್ಳಿ ಹನಿಯೂರು ಮತ್ತು ಮಾದಪ್ಪನ ಹಳ್ಳಿಯಲ್ಲಿರುವ ಪಶು ಚಿಕಿತ್ಸಾಲಯಗಳನ್ನು ಸ್ಥಳಾಂತರ ಮಾಡಲು ಸರ್ಕಾರ 2023ರ ಡಿಸೆಂಬರ್​ 15ರಂದು ನಿರ್ಧರಿಸಿದೆ. ಇದರಿಂದಾಗಿ ಈ ಭಾಗದ ರೈತರು ಹಾಗೂ ಪ್ರಾಣಿ ಸಾಕಣೆದಾರರಿಗೆ ತೀವ್ರ ತೊಂದರೆಯಾಗಿದೆ. ಆದ್ದರಿಂದ, ಸರ್ಕಾರದ ಸ್ಥಳಾಂತರ ನಿರ್ಧಾರ ಹಿಂಪಡೆಯಲು ನಿರ್ದೇಶಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.