ADVERTISEMENT

ರೇಣುಕ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನಿಗೆ ಹಲವು ಷರತ್ತು

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2024, 0:29 IST
Last Updated 31 ಅಕ್ಟೋಬರ್ 2024, 0:29 IST
ನಟ ದರ್ಶನ್‌
ನಟ ದರ್ಶನ್‌   

ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್, ವೈದ್ಯಕೀಯ ಚಿಕಿತ್ಸೆ ಪಡೆಯಲು ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ದರ್ಶನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಬೆಳಿಗ್ಗೆ ಪ್ರಕಟಿಸಿತು.

‘ಒಂದು ವೇಳೆ ದರ್ಶನ್‌ಗೆ ಶಸ್ತ್ರಚಿಕಿತ್ಸೆ ಮಾಡದೇ ಇದ್ದರೆ ಮುಂದೆ ಆಗಬಹುದಾದ ಪರಿಣಾಮಗಳ ಬಗ್ಗೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ (ಬಿಎಂಸಿಆರ್‌ಸಿ) ನರರೋಗ ವಿಭಾಗದ ಮುಖ್ಯಸ್ಥರು ತಿಳಿಸಿದ್ದಾರೆ. ಇದರಿಂದ ಮೇಲ್ನೋಟಕ್ಕೆ ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

‘ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನಲ್ಲಿ ಆರೋಗ್ಯದ ಹಕ್ಕೂ ಸೇರಿದೆ. ಆರೋಗ್ಯದ ಬಗ್ಗೆ ಕಾಳಜಿ ತೋರುವಲ್ಲಿ ವಿಳಂಬ ಸಲ್ಲ. ಇದು ಮುಂದೆ ಗಂಭೀರ ಪರಿಣಾಮಕ್ಕೆ ನಾಂದಿಯಾಗಬಹುದು’ ಎಂದು ಹೇಳಿದೆ.

ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪ್ರಕರಣದಲ್ಲಿ ವಿಶೇಷ ಪ್ರಾಸಿಕ್ಯೂಟರ್‌ ಆಗಿ ನೇಮಕಗೊಂಡಿದ್ದ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ದರ್ಶನ್‌ ಪರ ಹೈಕೋರ್ಟ್‌ ವಕೀಲ ಎಸ್‌.ಸುನಿಲ್‌ ಕುಮಾರ್ ವಕಾಲತ್ತು ವಹಿಸಿದ್ದರು.

ಷರತ್ತುಗಳು:

* ₹2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು.

* ಬೆಂಗಳೂರಿನಲ್ಲಿ ತಮ್ಮ ಇಚ್ಛೆಗೆ ಅನುಗುಣವಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು.

* ಜೈಲಿನಿಂದ ಬಿಡುಗಡೆಯಾದ ತಕ್ಷಣ ಆಸ್ಪತ್ರೆಗೆ ದಾಖಲಾಗಿ, ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು.

* ಯಾವಾಗ ಶಸ್ತ್ರಚಿಕಿತ್ಸೆ, ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ತದನಂತರ ಚಿಕಿತ್ಸೆ ಏನಾದರೂ ಇರಲಿದೆಯೇ ಎಂಬ ವಿವರಗಳನ್ನು ಬಿಡುಗಡೆಯಾದ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು.

* ಪ್ರಾಸಿಕ್ಯೂಷನ್‌ ಸಾಕ್ಷಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆದರಿಕೆ ಒಡ್ಡಬಾರದು ಅಥವಾ ಸಾಕ್ಷ್ಯ ತಿರುಚಬಾರದು.

* ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಆ ಚಿಕಿತ್ಸೆಯ ಮುನ್ನೋಟವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.

* ಮಧ್ಯಂತರ ಜಾಮೀನು ಅವಧಿಯಲ್ಲಿ ಆರೋಗ್ಯದ ಸ್ಥಿತಿ ಸೇರಿದಂತೆ ಇನ್ನಾವುದೇ ವಿಚಾರಕ್ಕೆ ಸಂಬಂಧಿಸಿ ಮುದ್ರಣ, ವಿದ್ಯುನ್ಮಾನ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಹೇಳಿಕೆ ನೀಡಬಾರದು.

* ಮಧ್ಯಂತರ ಜಾಮೀನು ಅವಧಿ ಮುಗಿದ ತಕ್ಷಣ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗಬೇಕು. ಇದು ಹೈಕೋರ್ಟ್‌ನ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ.

* ಪಾಸ್‌ಪೋರ್ಟ್‌ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಇದೂ ಈ ನ್ಯಾಯಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ.

* ಮಧ್ಯಂತರ ಜಾಮೀನು ಅವಧಿಯಲ್ಲಿ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಪ್ರದೇಶದಿಂದ ಹೊರಹೋಗುವಂತಿಲ್ಲ.

ಪತ್ನಿಯ ಅಪಾರ್ಟ್‌ಮೆಂಟ್‌ಗೆ ಬಂದ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ ಬುಧವಾರ ಸಂಜೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ತಡರಾತ್ರಿ ಬಂದರು. 

ಹೊಸಕೆರೆಹಳ್ಳಿಯ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌‌ನಲ್ಲಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೇರಿದ ಫ್ಲ್ಯಾಟ್ ಇದೆ‌.‌ ಅಲ್ಲಿಗೆ ತಡರಾತ್ರಿ ‌ಬಂದು ವಾಸ್ತವ್ಯ ಮಾಡಿದರು. ಬಳ್ಳಾರಿಯಿಂದ ಕಾರಿನಲ್ಲೇ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಜೊತೆಗೆ ಬಂದರು.

ದೇವನಹಳ್ಳಿಯ ಮೂಲಕ ನಗರ ಪ್ರವೇಶಿಸಿದ ಅವರು ಹೆಬ್ಬಾಳ ಮೇಲ್ಸೇತುವೆ, ಮಲ್ಲೇಶ್ವರ, ವಿಜಯನಗರ, ದೀಪಾಂಜಲಿನಗರ, ನಾಯಂಡಹಳ್ಳಿಯ ಮೂಲಕ ಫ್ಲ್ಯಾಟ್‌ಗೆ ಬಂದರು.

ದರ್ಶನ್ ಅವರು ಆರ್‌ಆರ್ ನಗರದ ನಿವಾಸಕ್ಕೆ ಬರುತ್ತಾರೆ ಎಂಬ ಮಾಹಿತಿ ಇತ್ತು. ಮನೆಯ ಸುತ್ತಮುತ್ತ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದರು. ಮೂವರು ಪಿಎಸ್‌ಐ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿತ್ತು. ಮನೆ ಬಳಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು.‌

ತಂಡ ತಂಡವಾಗಿ ಬರುತ್ತಿದ್ದ ಅಭಿಮಾನಿಗಳನ್ನು ಮಾರ್ಗ ಮಧ್ಯದಲ್ಲೇ ತಡೆದ ಪೊಲೀಸರು ವಾಪಸ್‌ ಕಳುಹಿಸಿದರು. ದಿಢೀರ್ ಮಾರ್ಗ ಬದಲಾವಣೆ ಮಾಡಿ ಹೊಸಕೆರೆಹಳ್ಳಿ ಅಪಾರ್ಟ್‌ಮೆಂಟ್‌ಗೆ ದರ್ಶನ್ ಅವರನ್ನು ಕರೆದೊಯ್ಯಲಾಯಿತು.

ಅಭಿಮಾನಿಗಳ ಸಂಭ್ರಮ: ದರ್ಶನ್ ಬರುತ್ತಿದ್ದ ಮಾರ್ಗದ ಉದ್ದಕ್ಕೂ ಅಭಿಮಾನಿಗಳು ಕಾರಿನತ್ತ ಕೈಬೀಸಿ ಜೈಕಾರ ಕೂಗಿದರು. ಅಲ್ಲಲ್ಲಿ ಪಟಾಕಿ ಸಿಡಿಸಿ ‘ಜೈ ಡಿ ಬಾಸ್’ ಘೋಷಣೆ ಕೂಗಿದರು. ದೇವನಹಳ್ಳಿಯಲ್ಲಿ ಟೋಲ್ ಬಳಿ ಕಾರನ್ನು ಅಡ್ಡಗಟ್ಟಲು ಮುಂದಾದ ಅಭಿಮಾನಿಗಳಿಗೆ ಪೊಲೀಸರು ಲಾಠಿ ಏಟು ನೀಡಿ ಚದುರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.