ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಈ ಸಂಬಂಧ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್, ‘ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ 4 ಸಾವಿರ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ ವಿಚಾರಣಾ ನ್ಯಾಯಾಲಯ ಮುಂದಿನ ಕ್ರಮ ಜರುಗಿಸಲಿದೆ. ಆದ್ದರಿಂದ, ಪವಿತ್ರಾ ಗೌಡ ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು. ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕಾರಣ ಪ್ರಕರಣದ 7ನೇ ಆರೋಪಿ ಅನುಕುಮಾರ್ ಸಹ ಹೈಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾರೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ನ್ಯಾಯಮೂರ್ತಿಗಳು, ಪವಿತ್ರಾ ಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಅವರನ್ನು ಉದ್ದೇಶಿಸಿ, ‘ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕಾರಣ ಸೆಷನ್ಸ್ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು. ಹಾಗಾಗಿ, ನೀವು ಈ ಅರ್ಜಿ ಮುಂದುವರಿಸುತ್ತೀರಾ ಅಥವಾ ಹಿಂಪಡೆಯುತ್ತೀರಾ’ ಎಂದು ಪ್ರಶ್ನಿಸಿದರು. ಇದಕ್ಕೆ ಟಾಮಿ ಸೆಬಾಸ್ಟಿಯನ್ ಅರ್ಜಿ ಹಿಂಪಡೆಯುವುದಾಗಿ ತಿಳಿಸಿದರು.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ 2024 ಆಗಸ್ಟ್ 31ರಂದು ವಜಾಗೊಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.