ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದರಿಂದಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಮುಷ್ಕರವನ್ನು ಮುಂದೂಡಿದೆ.
2020ರ ಜನವರಿಯಿಂದ 2023ರ ಫೆಬ್ರುವರಿವರೆಗಿನ 38 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿಯ ಬಗ್ಗೆ ಮತ್ತು 2024ರ ಜನವರಿಯಿಂದ ವೇತನ ಪರಿಷ್ಕರಣೆ ಬಗ್ಗೆ ಚರ್ಚಿಸಲು 15 ದಿನಗಳಲ್ಲಿ ಸಭೆ ನಡೆಸಲು ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. 38 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿಯ ಅವಧಿಯಲ್ಲಿ ನಿವೃತ್ತಿ ಹೊಂದಿದವರಿಗೆ ಅಂತಿಮ ಕ್ಲೇಮ್ಸ್ ಹಣ ₹ 226 ಕೋಟಿಯನ್ನು ನವೆಂಬರ್ 30ರ ಒಳಗೆ ಬಿಡುಗಡೆ ಮಾಡುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಆಡಳಿತ ವರ್ಷ ಮತ್ತು ನೌಕರರ ಕೊಡುಗೆ ಆಧಾರದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯ ಜಾರಿ ಮಾಡುವ, ಬಾಕಿ ಇರುವ ಅಂತರ ನಿಗಮ ವರ್ಗಾವಣೆಗಳ ಬಗ್ಗೆ ಶೀಘ್ರ ಆದೇಶ ನೀಡುವ ಬಗೆಗಿನ ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದು ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.
ಸಚಿವರೊಂದಿಗೆ ನಡೆದ ಅಧಿಕಾರಿಗಳು ಮತ್ತು ನೌಕರ ಸಂಘಟನೆಗಳ ತ್ರಿಪಕ್ಷೀಯ ಸಭೆಯಲ್ಲಿ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಅಧ್ಯಕ್ಷ ಬಿ. ಜಯದೇವರಾಜೇ ಅರಸು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿಐಟಿಯು) ಅಧ್ಯಕ್ಷ ಎಚ್.ಡಿ. ರೇವಪ್ಪ, ಕೆಎಸ್‌ಆರ್‌ಟಿಸಿ ಎಸ್‌ಸಿ ಆ್ಯಂಡ್ ಎಸ್‌ಟಿ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ವೆಂಕಟರಮಣಪ್ಪ, ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಆರ್. ಅದರಗುಂಚಿ, ಕೆಎಸ್‌ಆರ್‌ಟಿಸಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.