ADVERTISEMENT

ಉಪ ಲೋಕಾಯುಕ್ತರಾಗಿ ನ್ಯಾ.ಬಿ. ವೀರಪ್ಪ ನೇಮಕ; ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 15:37 IST
Last Updated 24 ಜೂನ್ 2024, 15:37 IST
ಬಿ.ವೀರಪ್ಪ
ಬಿ.ವೀರಪ್ಪ   

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ರಾಜ್ಯದ ನೂತನ ಉಪ ಲೋಕಾಯುಕ್ತರನ್ನಾಗಿ ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಒಂದು ಹುದ್ದೆ ಖಾಲಿ ಇತ್ತು. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ಅಡ್ವೊಕೇಟ್ ಜನರಲ್‌ ಶಶಿಕಿರಣ್‌ ಶೆಟ್ಟಿ ಸಭೆಯಲ್ಲಿ ಪಾಲ್ಗೊಂಡಿದ್ದರು.

‘ಉಪ ಲೋಕಾಯುಕ್ತರ ಹುದ್ದೆ ಭರ್ತಿಗೆ ಬಿ. ವೀರಪ್ಪ ಅವರ ಹೆಸರು ಮಾತ್ರ ಪ್ರಸ್ತಾಪವಾಯಿತು. ಸಭೆಯಲ್ಲಿದ್ದ ಎಲ್ಲರೂ ಸಹಮತ ವ್ಯಕ್ತಪಡಿಸಿದರು. ಅವರನ್ನೇ ನೇಮಕ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶೀಘ್ರದಲ್ಲಿ ಆದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ 1961ರ ಜೂನ್‌ 1ರಂದು ಜನಿಸಿದ್ದ ವೀರಪ್ಪ, ಬೆಂಗಳೂರಿನ ರೇಣುಕಾಚಾರ್ಯ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು 1988ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 1995ರಿಂದ 2015ರವರೆಗೆ ಸರ್ಕಾರಿ ವಕೀಲರಾಗಿ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಕಾರ್ಯನಿರ್ವಹಿಸಿದ್ದರು.

2015ರ ಜನವರಿಯಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ವೀರಪ್ಪ, 2016ರಿಂದ 2023ರ ಮೇವರೆಗೆ ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ತನಿಖೆಯ ಅಧಿಕಾರವನ್ನು ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಮರುಸ್ಥಾಪಿಸಿ ಐತಿಹಾಸಿಕ ತೀರ್ಪು ನೀಡಿದ್ದರು.

2021ರಲ್ಲಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಗಳ ಕುರಿತ ತನಿಖೆಗೆ ನೇಮಿಸಿದ್ದ ಆಯೋಗದ ಅಧ್ಯಕ್ಷರೂ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.